ADVERTISEMENT

ಬೆಲೆ ಏರಿಕೆಯೇ ಬಿಜೆಪಿ ಸಾಧನೆ: ಟೀಕೆ

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 5:02 IST
Last Updated 15 ಮಾರ್ಚ್ 2023, 5:02 IST
ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಉದ್ಘಾಟಿಸಿದರು
ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಉದ್ಘಾಟಿಸಿದರು   

ಕುಂದಾಣ (ದೇವನಹಳ್ಳಿ): ಬೆಲೆ ಏರಿಕೆಯಿಂದ ಮಹಿಳೆಯರು ಸಂಸಾರ ನಿಭಾಯಿಸುವುದೇ ಕಷ್ಟವಾಗಿದೆ. ಕುಟುಂಬದ ಆದಾಯ ಪಾತಾಳಕ್ಕೆ ಕುಸಿದಿದೆ. ಅಡುಗೆ ಅನಿಲ ಸಿಲಿಂಡರ್‌, ಅಡುಗೆ ಎಣ್ಣೆ ಸೇರಿದಂತೆ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಿದೆ. ಬೆಲೆ ಏರಿಸಿರುವುದೇ ಬಿಜೆಪಿ ಸಾಧನೆಯಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಪಿ.ಬಿ. ಶ್ರೀನಿವಾಸ್‌
ಟೀಕಿಸಿದರು.

ತಾಲ್ಲೂಕಿನ ಅರದೇಶನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಸಂಸದ ಆರ್. ಧ್ರುವನಾರಾಯಣ ಪಕ್ಷದ ಸಂಘಟನಾ ಚತುರರಾಗಿದ್ದರು. ಜನಾನುರಾಗಿಯಾದ ಅವರು ಜನರ ನಡುವೆ ಉತ್ತಮ ಕಾರ್ಯ ಮಾಡುತ್ತಿದ್ದರು. ಇಂತಹ ವ್ಯಕ್ತಿಯನ್ನು ಕಳೆದುಕೊಂಡಿರುವುದು ಕಾಂಗ್ರೆಸ್‌ಗೆ ತುಂಬಲಾರದ ನಷ್ಟ
ಎಂದರು.

ADVERTISEMENT

ಕಳೆದ ಎಂಟು ವರ್ಷದಲ್ಲಿ ಮೋದಿ ಸರ್ಕಾರದ ಸಾಧನೆ ಶೂನ್ಯ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ಸುಳ್ಳು ಭರವಸೆ ನೀಡಿ ಜನರನ್ನು ಯಾಮಾರಿಸಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಜನರು ಎಚ್ಚೆತ್ತುಗೊಂಡು ಮತ ನೀಡುವ ಮೊದಲು ಒಂದು ಬಾರಿ ಆಲೋಚಿಸಬೇಕಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರವಿದ್ದಾಗ ಆಗಿರುವ ಅಭಿವೃದ್ಧಿ ಕೆಲಸಗಳಿಂದ ಜನರು ಶಾಂತಿ, ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಭ್ರಷ್ಟ ಬಿಜೆಪಿ ಸರ್ಕಾರವನ್ನು ಅಂತ್ಯಗೊಳಿಸಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರುವುದು ಅನಿವಾರ್ಯವಾಗಿದೆ. ಬಿಜೆಪಿ ಬಂದಾಗಿನಿಂದಲೂ ಒಂದಲ್ಲಾ ಒಂದು ರೀತಿಯಲ್ಲಿ ಜನರು ಮಾನಸಿಕವಾಗಿ ತತ್ತರಿಸುತ್ತಿದ್ದಾರೆ ಎಂದರು.

ಬಿಜೆಪಿ ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ದೇಶ ಮತ್ತು ರಾಜ್ಯದ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್‌, ಮಾಜಿ ಶಾಸಕ ಮುನಿನರಸಿಂಹಯ್ಯ, ಸಾಗರಿಕ, ಕೀರ್ತಿ ಗಣೇಶ್, ಬಸವರಾಜ್, ಸಿ. ಜಗನ್ನಾಥ್‌, ಸಿ. ಪ್ರಸನ್ನಕುಮಾರ್, ಬಿ. ರಾಜಣ್ಣ, ಎಸ್‌.ಆರ್‌. ರವಿಕುಮಾರ್, ಕೆ.ಸಿ. ಮಂಜುನಾಥ್, ಕೆ.ಆರ್‌. ನಾಗೇಶ್, ಎಂ. ಲೋಕೇಶ್, ಚಿನ್ನಪ್ಪ, ಚಂದ್ರಶೇಖರ್, ಅರದೇಶನಹಳ್ಳಿ ವಿಜಯಕುಮಾರ್, ದೀಪ್ತಿ ವಿಜಯ್‌ಕುಮಾರ್, ಬಾಲಸುಬ್ರಮಣ್ಯ, ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.