ADVERTISEMENT

ದೇವನಹಳ್ಳಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 4:44 IST
Last Updated 8 ಆಗಸ್ಟ್ 2021, 4:44 IST

ದೇವನಹಳ್ಳಿ:ಪ್ರಸಕ್ತ ಮುಂಗಾರು ಹಂಗಾಮಿನಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ.

ಮುಂಗಾರು ಹಂಗಾಮಿಗೆ ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ), ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಹುರುಳಿ (ಮಳೆಯಾಶ್ರಿತ) ಬೆಳೆಯುವ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ.

ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆದ, ಪಡೆಯದ ರೈತರು ಈ ಯೋಜನೆಯ ಉಪಯೋಗ ಪಡೆಯಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ್ ಸಂಖ್ಯೆ ನೀಡಬೇಕು. ಅಧಿಸೂಚಿಸಲಾದ ಬೆಳೆಗಳಿಗೆ ವಿಮಾ ಪ್ರಸ್ತಾವನೆಯನ್ನು ಆಗಸ್ಟ್ 16ರೊಳಗೆ ಸಲ್ಲಿಸಬಹುದು.

ADVERTISEMENT

ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ಅವಧಿಯೊಳಗೆ ನೋಂದಾಯಿಸಿದ ಆರ್ಥಿಕ ಸಂಸ್ಧೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸಬಹುದಾಗಿದೆ.

ಅಧಿಸೂಚಿತ ಘಟಕದಲ್ಲಿ ಶೇ 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ ವಿಮಾ ಮೊತ್ತದ ಗರಿಷ್ಠ ಶೇ 25ರಷ್ಟು ಬೆಳೆ ವಿಮಾ ಮೊತ್ತವನ್ನು ವಿಮಾ ಸಂಸ್ಧೆಯು ವಿಮೆ ಮಾಡಿಸಿದ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ವಿಮೆಯನ್ನು ರದ್ದುಪಡಿಸಲಾಗುತ್ತದೆ. ಈ ವಿಮಾ ರಕ್ಷಣೆಯು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ತಾಲ್ಲೂಕುವಾರು ಮುಖ್ಯ ಬೆಳೆಗಳಿಗೆ ಮಾತ್ರ ಅನ್ವಯಿಸುತ್ತದೆ.

ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆಯಡಿ ರಾಜ್ಯ ಸರ್ಕಾರ ನಡೆಸುವ ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಕಂಡು ಹಿಡಿಯಲಾದ ಇಳುವರಿ ಮಾಹಿತಿಯನ್ನು ಮಾತ್ರ ಪರಿಗಣಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಲೆಕ್ಕಹಾಕಿ ಇತ್ಯರ್ಥಪಡಿಸಲಾಗುವುದು.

ರೈತರು ರೈತರು ಪಾವತಿಸಬೇಕಾದ ವಿಮಾ ಕಂತಿನ ವಿವರ ಹಾಗೂ ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.