ADVERTISEMENT

‘ಎತ್ತಿನಹೊಳೆ ಯೋಜನೆಗೆ ಅಪಪ್ರಚಾರ ಸಲ್ಲ’

ತಾಲ್ಲೂಕು ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಯುವ ಮುಖಂಡ ಹರ್ಷ ಮೊಯಿಲಿ ಭಾಗಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 12:58 IST
Last Updated 4 ಜನವರಿ 2019, 12:58 IST
ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು 
ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು    

ದೇವನಹಳ್ಳಿ: ‘ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಮುಂಬರುವ ಪ್ರತಿಯೊಂದು ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಬೇಕಾದರೆ ಮುಖಂಡರಲ್ಲಿ ಒಗ್ಗಟ್ಟು ಮುಖ್ಯ’ ಎಂದು ಕಾಂಗ್ರೆಸ್ ಯುವ ಮುಖಂಡ ಹರ್ಷ ಮೊಯಿಲಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

‘ಸಂಸದ ಎಂ.ವೀರಪ್ಪ ಮೊಯಿಲಿ ಕಳೆದ ಹತ್ತು ವರ್ಷದಿಂದ ಸಾಧಿಸಿರುವ ಅಭಿವೃದ್ಧಿ ಬಗ್ಗೆ ಪ್ರಚಾರ ನಡೆದಿಲ್ಲ. ಪ್ರತಿಯೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ನೀಡುತ್ತೇವೆ’ ಎಂದು ತಿಳಿಸಿದರು.

ADVERTISEMENT

‘ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷ ಮೊದಲು ಗೆಲುವು ಸಾಧಿಸಬೇಕು. ಎತ್ತಿನಹೊಳೆ ಯೋಜನೆಯನ್ನು ಮುಖಂಡರು ಖುದ್ದು ಪರಿಶೀಲನೆ ನಡೆಸಿದರೆ ವಾಸ್ತವ ತಿಳಿಯಲಿದೆ’ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಚೇತನ್‌ಗೌಡ ಮಾತನಾಡಿ, ‘ಕ್ಷೇತ್ರದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಎಪಿಎಂಸಿಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆದರೆ, ಯಾವುದೇ ಇಲಾಖೆಗೆ ಹೋದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆಯಾಗುತ್ತಿದೆ. ಅಲ್ಲದೆ, ಪೊಲೀಸರ ಉಪಟಳ ಹೆಚ್ಚಾಗಿದ್ದು, ಮುಖಂಡರರ ಬಲ ಕುಂದಿಸಲು ಸಾಧ್ಯವಿಲ್ಲ’ ಎಂದರು.

ಕೆಪಿಸಿಸಿ ಹಿಂದುಳಿದ ವರ್ಗದ ಜಿಲ್ಲಾ ಘಟಕ ಅಧ್ಯಕ್ಷ ಅಪ್ಪಣ್ಣ ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ಪರದಾಡುವುದಕ್ಕಿಂತ ಪೂರ್ವ ಸಿದ್ಧತೆ ಅವಶ್ಯ. ವಿಪರ್ಯಾಸವೆಂದರೆ ಕಾಂಗ್ರೆಸ್ ಶಕ್ತಿ ಅಭಿಯಾನ ನೋಂದಣಿ ಚುರುಕುಗೊಂಡಿಲ್ಲ. ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಆಗುತ್ತಿಲ್ಲ. ವಿಜಯಪುರ ಪುರಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಅಧಿಕ ಸಂಖ್ಯೆಯಲ್ಲಿದ್ದರೂ ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಲಿಲ್ಲ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಮಾಜಿ ಶಾಸಕ ವೆಂಕಟಸ್ವಾಮಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 70ಸಾವಿರ ಮತ ಸಿಕ್ಕಿದೆ. ಅದಕ್ಕೆ ವಿಷಾದ ಇಲ್ಲ. ವ್ಯಕ್ತಿಗಿಂತ ಪಕ್ಷ ಮುಖ್ಯ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.

ಕೆಪಿಸಿಸಿ ರಾಜ್ಯ ಘಟಕ ಸದಸ್ಯ ಚಿನ್ನಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್, ಮುಖಂಡ ವಿ.ನಾರಾಯಣಸ್ವಾಮಿ, ಜಿಲ್ಲಾ ಸಹಕಾರಿ ಯುನಿಯನ್ ನಿರ್ದೇಶಕ ಸಂಪಂಗಿಗೌಡ ಮಾತನಾಡಿದರು.

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗ ಘಟಕ ಉಪಾಧ್ಯಕ್ಷ ಸಿ.ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಆರ್.ರವಿ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಲಕ್ಷ್ಮಿನಾರಾಯಣ್, ಕೆ.ಸಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಸದಸ್ಯ ವೆಂಕಟೇಶ್, ಪುರಸಭೆ ಉಪಾಧ್ಯಕ್ಷೆ ಆಶಾರಾಣಿ, ಕೆಪಿಸಿಸಿ ಸದಸ್ಯ ರಾಮಚಂದ್ರಪ್ಪ, ಕೆಪಿಸಿಸಿ ಜಿಲ್ಲಾ ಘಟಕ ಸದಸ್ಯ ಎಂ.ನಾರಾಯಣಸ್ವಾಮಿ, ಪುರಸಭೆ ಸದಸ್ಯ ಜಿ.ಎನ್.ವೇಣುಗೋಪಾಲ್, ತೂಬುಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ರಂಗಪ್ಪ, ಉಪಾಧ್ಯಕ್ಷರಾದ ಎಸ್.ಜಿ.ಮಂಜುನಾಥ್, ಪುರುಷೋತ್ತಮ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಘಟಕ ಅಧ್ಯಕ್ಷ ಮಾರುತಿ, ಜಿಲ್ಲಾ ಯುವ ಕಾಂಗ್ರೆಸ್ ಘಟಕ ಅಧ್ಯಕ್ಷ ನಾಗೇಶ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.