ADVERTISEMENT

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 1:54 IST
Last Updated 29 ಜನವರಿ 2021, 1:54 IST
ಪ್ರಜಾ ವಿಮೋಚನಾ ಚಳವಳಿ(ಸ್ವಾಭಿಮಾನ) ವತಿಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು
ಪ್ರಜಾ ವಿಮೋಚನಾ ಚಳವಳಿ(ಸ್ವಾಭಿಮಾನ) ವತಿಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು   

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸುತ್ತಲೇ ಇರುವ ಕೇಂದ್ರ ಸರ್ಕಾರದ ವಿರುದ್ಧ ಪ್ರಜಾ ವಿಮೋಚನಾ ಚಳವಳಿ (ಸ್ವಾಭಿಮಾನ) ವತಿಯಿಂದ ಗುರುವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಿವಿಸಿ ರಾಜ್ಯ ಘಟಕದ ಅಧ್ಯಕ್ಷ ಮುನಿಆಂಜನಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಹನುಮಣ್ಣ ಗೂಳ್ಯ, ಏಳು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಎನ್‍ಡಿಎ ಸರ್ಕಾರ ಜನವಿರೋಧಿ ಆಡಳಿತ ನೀಡುತ್ತಲೇ ಇದೆ. ನೋಟು ಅಮಾನೀಕರಣದಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬಂದಿತ್ತು. ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಲಕ್ಷಾಂತರ ಜನ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಈ ನಡುವೆ ಜನಸಾಮಾನ್ಯರಿಗೆ ಅಗತ್ಯವಾದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸಿ ಗಾಯದ ಮೇಲೆ ಬರೆ ಹಾಕಿದೆ. ತೈಲಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತು ಬೆಲೆ ಹೆಚ್ಚಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಸರ್ಕಾರ ಕೂಡಲೇ ತೈಲಬೆಲೆ ಏರಿಕೆ ನಿಯಂತ್ರಣ ಮಾಡಬೇಕಿದೆ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಿವಿಸಿ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಆಯೊಬ್‌
ಖಾನ್, ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಚನ್ನಮರಿಯಪ್ಪ, ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ವಸಂತಮ್ಮ, ತಾಲ್ಲೂಕಿನ ಅಧ್ಯಕ್ಷ ತಳಗವಾರ ಪುನೀತ್, ಉಪಾಧ್ಯಕ್ಷ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಮುನಿರಾಜುದಾಸ, ಕಾರ್ಯದರ್ಶಿ ಲೋಕೇಶ್, ತಾಲ್ಲೂಕಿನ ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ರಾಘವೇಂದ್ರಚಾರ್, ನೆಲ್ಲುಕುಂಟೆಮೂರ್ತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.