ADVERTISEMENT

716 ಕಂದಾಯ ಗ್ರಾಮಗಳು ಪೋಡಿ ಮುಕ್ತ

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಆರ್‌.ಆಶೋಕ್‌

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 15:34 IST
Last Updated 1 ನವೆಂಬರ್ 2019, 15:34 IST
ರಾಜ್ಯೋತ್ಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು
ರಾಜ್ಯೋತ್ಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು   

ದೇವನಹಳ್ಳಿ: ಜಿಲ್ಲೆಯಲ್ಲಿ 1075 ಕಂದಾಯ ಗ್ರಾಮಗಳ ಪೈಕಿ 716 ಕಂದಾಯ ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಹೇಳಿದರು.

ಇಲ್ಲಿನ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಜಿಲ್ಲಾ ಮಟ್ಟದ 64ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಅಂತರ್ಜಲ ಮಟ್ಟ ಅಭಿವೃದ್ಧಿ ಪಡಿಸಲು ನೀಲಗಿರಿ ಮರಗಳ ತೆರವು ಅನಿವಾರ್ಯವಾಗಿದೆ, ತಳಮಟ್ಟದಲ್ಲಿ ನೀಲಗಿರಿ ಮರ ತೆರವುಗೊಳಿಸಲು ಇನ್ನಷ್ಟು ಜಾಗೃತಿ ಮೂಡಿಸಿ ನೀಲಗಿರಿ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಹೇಳಿದರು.

ADVERTISEMENT

ಐತಿಹಾಸಿಕ ಕುರುಹುಗಳನ್ನು ತನ್ನ ಒಡಲಿನಲ್ಲಿ ಇಟ್ಟುಕೊಂಡಿರುವ ಗ್ರಾಮಾಂತರ ಜಿಲ್ಲೆಯಯಲ್ಲಿ ಪ್ರಸಕ್ತ ಸಾಲಿನ ಆಗಸ್ಟ್ ಅಂತ್ಯದವರೆಗೆ ಜಿಲ್ಲೆಯಲ್ಲಿ 1,021 ಕಂದಾಯ ಅದಾಲತ್ ಕಾರ್ಯಕ್ರಮ ನಡೆಸಲಾಗಿದೆ. ಈ ಅದಾಲತ್‌ಗಳಲ್ಲಿ 22,252 ಅರ್ಜಿಗಳ ಪೈಕಿ 21,235 ಅರ್ಜಿಗಳು ವಿಲೇವಾರಿಯಾಗಿವೆ. ಸಕಾಲ ಯೋಜನೆಯಡಿ 2,44,239 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಎರಡು ಎಕರೆಗಿಂತ ಕಡಿಮೆ ಇರುವ ರೈತರ ಕುಟುಂಬಕ್ಕೆ ವಾರ್ಷಿಕ ₹6 ಸಾವಿರ, ಜತೆಗೆ ರಾಜ್ಯ ಸರ್ಕಾರ ₹4 ಸಾವಿರ ಸೇರಿ ಒಟ್ಟು 10 ಸಾವಿರ ರೂ ಪ್ರತಿ ಕುಟುಂಬಗಳ ಬ್ಯಾಂಕ್ ಖಾತೆಗೆ ನೇರವಾಗಿ ವಿಲೇವಾರಿ ಮಾಡುವ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾಯರ ದೂರದೃಷ್ಟಿ ಚಿಂತನೆಯಿಂದ ಭಾಷವಾರು ಪ್ರಾಂತ್ಯ ರಚನೆ ಹೋರಾಟ ಆರಂಭಗೊಂಡಿತ್ತು, ಆದರೂ ಅನೇಕ ಗಡಿ ಭಾಗದಲ್ಲಿ ಕನ್ನಡ ಭಾಷೆ ಮಾತನಾಡುವ ಗ್ರಾಮಗಳು ಸೊರಗುತ್ತಿವೆ. ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ ಮಹನೀಯರನ್ನು ನೆನಪಿಸಿ ಗೌರವಿಸುವ ಈ ನಾಡಹಬ್ಬ ಮುಂದಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಇನ್ನಷ್ಟು ಸ್ಥಳೀಯರನ್ನು ಗೌರವಿಸುವ ಅದ್ಧೂರಿ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.

ದೇವನಹಳ್ಳಿ ತಾಲ್ಲೂಕಿನಲ್ಲಿ ಯಾವುದೇ ಶಾಶ್ವತ ನೀರಾವರಿ ಸೌಲಭ್ಯಗಳಿಲ್ಲ,ಕುಡಿಯುವ ನೀರಿನ ಸಮಸ್ಯೆ ಪ್ರತಿ ಬೇಸಿಗೆ ಕಾಲದಲ್ಲಿ ತೀವ್ರಗೊಳ್ಳುತ್ತಿದೆ. ಜಿಲ್ಲಾ ಕೇಂದ್ರ ಒಡಲಿನಲ್ಲಿ ಇಟ್ಟುಕೊಂಡಿರುವ ತಾಲ್ಲೂಕಿನಲ್ಲಿ ಸಾಕಷ್ಟು ರಸ್ತೆಗಳು ಅಭಿವೃದ್ಧಿಯಾಗಬೇಕು ಎಂದು ತಿಳಿಸಿದರು.

ವಿಮಾನ ನಿಲ್ದಾಣಕ್ಕೆ ಫಲವತ್ತಾದ ಭೂಮಿ ನೀಡಿದ ರೈತರು ಕನಿಷ್ಟ ನಿವೇಶನವಿಲ್ಲದೆ ಬೀದಿ ಪಾಲಾಗಿದ್ದಾರೆ. ರೈತರಿಗೆ ಭದ್ರತೆ ನೀಡಲು ಸರ್ಕಾರ ಪಕ್ಷಾತೀತವಾಗಿ ಅನುದಾನ ನೀಡಿ ಸಹಕರಿಸಬೇಕು ಎಂದು ಹೇಳಿದರು.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿರುವ ತಾಲ್ಲೂಕಿನಲ್ಲಿ ಸಮಗ್ರ ಅಭಿವೃದ್ಧಿಯಾಗಬೇಕು, ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕು; ಅರ್ಹರಿಗೆ ಸೂರು ಕಲ್ಪಿಸಬೇಕು. ಅಂತರ್ಜಲ ವೃದ್ಧಿ ಪರಿಸರ ಸಂರಕ್ಷಣೆ, ಕೆರೆಗಳ ದುರಸ್ತಿ ಬಗ್ಗೆ ಸಚಿವರು ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಚೈತ್ರಾ ವೀರೇಗೌಡ, ಉಪಾಧ್ಯಕ್ಷೆ ಲಲಿತಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್, ಎ.ಪಿ.ಎಂ.ಸಿ.ಅಧ್ಯಕ್ಷ ಕೆ.ವಿ.ಮಂಜುನಾಥ್, ಎ.ಪಿ.ಎಂ.ಸಿ.ಉಪಾಧ್ಯಕ್ಷ ಎಸ್.ಸುಧಾಕರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್, ತಹಶೀಲ್ದಾರ್ ರಾಜಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಹನುಮಂತರಾಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್‌.ಎಂ.ರವಿಕುಮಾರ್, ಹೈಕೋರ್ಟ್‌ ವಕೀಲ ಡಿ.ಸಿ ನಾರಾಯಣಸ್ವಾಮಿ, ಮುಖಂಡ ಸುನಿಲ್‌ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.