ADVERTISEMENT

‘ಚುನಾವಣೆ ಬಂದಾಗ ರಾಮನ ನೆನಪು’

ವೀರಪ್ಪಮೊಯಿಲಿ ಪರವಾಗಿ ಸಚಿವ ಡಿ.ಕೆ. ಶಿವಕುಮಾರ್‌ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 13:41 IST
Last Updated 11 ಏಪ್ರಿಲ್ 2019, 13:41 IST
ವಿಜಯಪುರದ ಶಿವಗಣೇಶ ಸರ್ಕಲ್‌ನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿದರು 
ವಿಜಯಪುರದ ಶಿವಗಣೇಶ ಸರ್ಕಲ್‌ನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿದರು    

ವಿಜಯಪುರ: ‘ಚುನಾವಣೆ ಬಂದಾಗ ಬಿಜೆಪಿಗೆ ರಾಮಮಂದಿರ ನೆನಪಾಗುತ್ತದೆ. ಆ ಪಕ್ಷದಲ್ಲಿ ಹಿರಿಯರಿಗೆ ಸ್ಥಾನಮಾನ ಇಲ್ಲ. ನೀಡಿದ ಭರವಸೆ ಉಳಿಸಿಕೊಳ್ಳುವ ಜಾಯಮಾನವೂ ಅವರದ್ದಲ್ಲ’ ಎಂದು ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಲ್ಲಿನ ಶಿವಗಣೇಶ ಸರ್ಕಲ್‌ನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ವೀರಪ್ಪ ಮೊಯಿಲಿ ಅವರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಲಾಲ್ ಕೃಷ್ಣ ಅಡ್ವಾಣಿ, ಉಮಾ ಭಾರತಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ಬಹುತೇಕ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸಿಲ್ಲ.ಯಾರ ಬ್ಯಾಂಕ್ ಖಾತೆಗಳಿಗೂ ₹15 ಲಕ್ಷ ಬರಲಿಲ್ಲ. ಕಾರ್ಪೋರೇಟ್ ಕಂಪನಿಗಳನ್ನು ಜತೆಯಲ್ಲಿಟ್ಟುಕೊಂಡು ವಿದೇಶಗಳಿಗೆ ಸುತ್ತಿದ್ದು ಮೋದಿ ಅವರ ಸಾಧನೆ ಎಂದು ದೂರಿದರು.

ADVERTISEMENT

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆನ್ನುವ ಉದ್ದೇಶದಿಂದ ಹಿಂದಿನ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು. ದೇಶದ ಹಿತದೃಷ್ಟಿಯಿಂದ ಒಂದಾಗಿ ಸರ್ಕಾರ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಸಂಸದ ವೀರಪ್ಪ ಮೊಯಿಲಿ ಅವರನ್ನು ಗೆಲ್ಲಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ಈ ದೇಶ ಅಭಿವೃದ್ಧಿಯತ್ತ ಸಾಗಬೇಕಾದರೆ, ಜಾತ್ಯತೀತ ಪಕ್ಷಗಳು ಒಂದಾಗಿ ಮಾಡುತ್ತಿರುವ ಹೋರಾಟಕ್ಕೆ ಜಯಸಿಗಬೇಕು. ಧರ್ಮ ಮತ್ತು ಅಧರ್ಮದ ನಡುವೆ ನಡೆಯುತ್ತಿರುವ ಈ ಯುದ್ಧದಲ್ಲಿ ಧರ್ಮಕ್ಕೆ ಜಯಸಿಗುತ್ತದೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮೊಯಿಲಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಏನೂ ಮಾಡಿಲ್ಲವೆಂದು ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ಏನು ಮಾಡಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ’ ಎಂದರು.

ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದೆ. ಕೇಂದ್ರದಲ್ಲಿಯೂ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರು ಎಲ್ಲರೂ ನೆಮ್ಮದಿಯಾಗಿ ಜೀವನ ಮಾಡಲು ಸಾಧ್ಯವಾಗುತ್ತದೆ ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಕೆ.ವೆಂಕಟಸ್ವಾಮಿ, ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ, ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಹರ್ಷ ಮೊಯಿಲಿ, ಬಿ. ಚೇತನ್‌ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ, ಚಿನ್ನಪ್ಪ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಇರಿಗೇನಹಳ್ಳಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಎಸ್.ಸಿ.ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ನಗರ ಜೆಡಿಎಸ್ ಘಟಕದ ಅಧ್ಯಕ್ಷ ಎಸ್.ಭಾಸ್ಕರ್, ಪುರಸಭಾ ಸದಸ್ಯ ಆರ್.ಸಿ.ಮಂಜುನಾಥ್, ವಿ.ಎಂ. ನಾಗರಾಜ್, ಕೆಪಿಸಿಸಿ ಎಸ್.ಸಿ ಘಟಕದ ರಾಜ್ಯ ಸಂಚಾಲಕ ಚಂದೇನಹಳ್ಳಿ ಮುನಿಯಪ್ಪ, ಸ್ಥಳೀಯ ಪುರಸಭಾ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.