ADVERTISEMENT

ರುರ್ಬನ್ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ

ಹೆನ್ನಾಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದ ಡಿ.ಕೆ.ಸುರೇಶ್

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2020, 13:12 IST
Last Updated 22 ಫೆಬ್ರುವರಿ 2020, 13:12 IST
ಆನೇಕಲ್ ತಾಲ್ಲೂಕಿನ ಹೆನ್ನಾಗರದಲ್ಲಿ ರುರ್ಬನ್ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಸಂಸದ ಡಿ.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು
ಆನೇಕಲ್ ತಾಲ್ಲೂಕಿನ ಹೆನ್ನಾಗರದಲ್ಲಿ ರುರ್ಬನ್ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಸಂಸದ ಡಿ.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು   

ಆನೇಕಲ್: ಕೇಂದ್ರ, ರಾಜ್ಯ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗಾಗಿ ರುರ್ಬನ್‌ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ ಗ್ರಾಮಗಳ ಸಮಗ್ರ ಅಭಿವೃದ್ಧಿಯಾಗುತ್ತದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಅವರು ತಾಲ್ಲೂಕಿನ ಹೆನ್ನಾಗರದಲ್ಲಿ ರುರ್ಬನ್‌ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಆನೇಕಲ್‌ ತಾಲ್ಲೂಕಿನ ಹೆನ್ನಾಗರ, ಬ್ಯಾಗಡದೇನಹಳ್ಳಿ, ಹಾರಗದ್ದೆ ಮತ್ತು ಹುಲಿಮಂಗಲ ಗ್ರಾಮ ಪಂಚಾಯಿತಿಗಳನ್ನು ರುರ್ಬನ್‌ ಯೋಜನೆಗೆ ಆಯ್ಕೆ ಮಾಡಲಾಗಿದೆ. ಶೇ 30ರಷ್ಟು ಅನುದಾನವನ್ನು ಕೇಂದ್ರ, ಶೇ 30ರಷ್ಟು ಅನುದಾನವನ್ನು ರಾಜ್ಯ ಭರಿಸಲಿವೆ. ಉಳಿಕೆ ಶೇ 40ರಷ್ಟು ಅನುದಾನವನ್ನು ಆಯಾ ಗ್ರಾಮ ಪಂಚಾಯಿತಿಗಳು ಕ್ರೋಡಿಕರಿಸಿ ಅಭಿವೃದ್ಧಿ ಪಡಿಸುವ ಯೋಜನೆ ಇದಾಗಿದೆ ಎಂದು ತಿಳಿಸಿದರು.

ADVERTISEMENT

ನಾಲ್ಕು ಗ್ರಾಮ ಪಂಚಾಯಿತಿಗಳಿಗೆ ಒಟ್ಟು ₹100 ಕೋಟಿ ಅನುದಾನವನ್ನು ರುರ್ಬನ್‌ ಯೋಜನೆಯಲ್ಲಿ ಬಳಕೆ ಮಾಡಲು ಅವಕಾಶವಿದೆ. ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆ ಪಡೆಯಲಾಗಿದೆ. ಅದರಂತೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಾಗರ, ಮಾಸ್ತೇನಹಳ್ಳಿ, ಯಾರಂಡಹಳ್ಳಿ, ಕಾಚನಾಯಕನಹಳ್ಳಿ ಗ್ರಾಮಗಳಿಗೆ ಕಾವೇರಿ ನೀರು ಪೂರೈಕೆಗಾಗಿ ತಲಾ 15 ಲಕ್ಷ ಲೀಟರ್‌ ಸಾಮರ್ಥ್ಯದ ನಾಲ್ಕು ಜಲ ಸಂಗ್ರಹಾಗಾರಗಳನ್ನು ತಲಾ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಭೂಮಿ ಪೂಜೆ ಮಾಡಲಾಗಿದೆ. ಕೈಗಾರಿಕಾ ಪ್ರದೇಶವಾಗಿದ್ದು ಅಭಿವೃದ್ಧಿ ಹೊಂದುತ್ತಿದೆ ಎಂದರು.

ಈ ಭಾಗದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಆನೇಕಲ್‌ ತಾಲ್ಲೂಕಿಗೆ ಕಾವೇರಿ ನೀರು ಪೂರೈಕೆ ಮಾಡಲು ಯೋಜನೆ ಮಂಜೂರಾತಿಯಾಗಿ ಅನುಷ್ಠಾನಕ್ಕೆ ಬಂದಿದೆ ಎಂದು ತಿಳಿಸಿದರು.

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ಸಮಸ್ಯೆ ನಿವಾರಣೆಗಾಗಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆಗೆ 5 ಎಕರೆ ಜಮೀನು ಮಂಜೂರು ಮಾಡಿಸಲಾಗಿದೆ. ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಿದರೆ ಹೆಚ್ಚಿನ ಅನುದಾನ ಬರುತ್ತದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. 94ಸಿ ಮತ್ತು 94ಸಿಸಿ ಅಡಿಯಲ್ಲಿ ಹಕ್ಕುಪತ್ರಗಳ ವಿತರಿಸುವ ಕಾರ್ಯಕ್ಕೆ ವೇಗ ನೀಡಲಾಗುವುದು ಎಂದರು.

ವಿಧಾನ ಪರಿಷತ್‌ ಸದಸ್ಯ ಎಂ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಜೆ.ಪ್ರಸನ್ನಕುಮಾರ್‌, ಎಪಿಎಂಸಿ ಅಧ್ಯಕ್ಷ ನರೇಂದ್ರಬಾಬು, ಮುಖಂಡರಾದ ಆರ್‌.ಕೆ.ರಮೇಶ್‌, ಎಚ್.ಎಸ್.ಬಸವರಾಜು, ಎನ್‌.ಬಿ.ಐ.ನಾಗರಾಜು, ಎಂ.ಬಾಬು, ಕೆ.ಎಸ್‌.ನಟರಾಜ್‌, ಹಾ.ವೇ.ವೆಂಕಟೇಶ್‌, ಮರಿಸ್ವಾಮಿ, ಕಾಂತರಾಜು, ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್‌, ತಾಲ್ಲೂಕು ಪಂಚಾಯಿತಿ ಸದಸ್ಯೆ ರೇಖಾ ಕೇಶವರೆಡ್ಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುಳ, ರಾಜಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಆರ್.ಎಸ್.ಪ್ರಕಾಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.