ADVERTISEMENT

ದೊಡ್ಡಬಳ್ಳಾಪುರ | ಸೋಂಕು ನಿಯಂತ್ರಣಕ್ಕೆ ಆತ್ಮಸ್ಥೈರ್ಯ ಅಗತ್ಯ

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 17:07 IST
Last Updated 3 ಜುಲೈ 2020, 17:07 IST
ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿದರು
ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿದರು   

ದೊಡ್ಡಬಳ್ಳಾಪುರ: ‘ಕೋವಿಡ್‌ ವಿರುದ್ಧದ ಹೋರಾಟಕ್ಕೆ ಸ್ವಯಂ ಸೇವಕರ ಅವಶ್ಯಕತೆಯ ಜೊತೆಗೆ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕಿದೆ’ ಎಂದುತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಬಸವ ಭವನದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳು ಹಾಗೂ ರಾಜಕೀಯ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ನಗರ ಹಾಗೂ ಗ್ರಾಮಾಂತರ ಸೇರಿ 20 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಹದಿನೆಂಟು ಮಂದಿಗೆ ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕೋವಿಡ್-19 ಇನ್ನೂ ಸಮುದಾಯಕ್ಕೆ ಹರಡುವ ಹಂತ ತಲುಪಿಲ್ಲ.ತಾಲ್ಲೂಕಿನ ಜನಸಂಖ್ಯೆಗೆ ಪೂರಕವಾಗಿ ವೈದ್ಯಕೀಯ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ ಇದೆ’ ಎಂದರು.

ADVERTISEMENT

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ‘ಲಾಕ್‌ಡೌನ್‌ ಮಾಡುವ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸ್ಥಳೀಯವಾಗಿ ಕೊರೊನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ನಗರದ ಹೊರವಲಯದ ಬೆಸೆಂಟ್ ಪಾರ್ಕ್‍ನಲ್ಲಿ 150 ಹಾಸಿಗೆಗಳ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ’ ಎಂದರು.

‘ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಮನವಿ ಮಾಡಲಾಗುವುದು. ನಗರ ಪ್ರದೇಶದಲ್ಲಿ ಎರಡು ವಾರ್ಡ್‌ಗಳಿಗೆ ಒಂದು ಕಾರ್ಯಪಡೆ ರಚಿಸಲಾಗುವುದು. ಸ್ವಯಂ ಸೇವಕರನ್ನು ಬಳಸಿಕೊಳ್ಳಲು ಇರುವ ಅವಕಾಶಗಳ ಬಗ್ಗೆ ಚಿಂತನೆ ನಡೆಸಲಾಗುವುದು. ಸೋಂಕು ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟವರಿಗೆ ತಿಳಿಸಲಾಗುವುದು’ ಎಂದರು.

‘ಲಾಕ್‌ಡೌನ್‌ ಜಾರಿಯಿಂದ ಸೋಂಕು ಕಡಿಮೆಯಾಗುವುದಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಎನ್‍ಸಿಸಿ, ಸ್ಕೌಟ್ಸ್ ಮೊದಲಾದ ಸಂಘಟನೆಗಳನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಬಹುದು. ನಗರ ಹಾಗೂ ಗ್ರಾಮಾಂತರ ಪ್ರತ್ಯೇಕ ಮಾಡಿ ಅನಾವಶ್ಯಕ ಓಡಾಟಗಳಿಗೆ ಕಡಿವಾಣ ಹಾಕಬೇಕು’ ಎಂಬ ಸಲಹೆ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಮುಖಂಡರಿಂದ ವ್ಯಕ್ತವಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಡಿವೈಎಸ್‍ಪಿ ಟಿ.ರಂಗಪ್ಪ, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.