ADVERTISEMENT

ಆನೇಕಲ್: ಶ್ರಾವಣ ಕಡೆ ಶನಿವಾರ ಸಂಭ್ರಮ

ದೇಗುಲಗಳಲ್ಲಿ ವಿಶೇಷ ಅಲಂಕಾರ: ಸಾಲುಗಟ್ಟಿ ನಿಂತು ದರ್ಶನ ಪಡೆದ ಭಕ್ತರು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 3:06 IST
Last Updated 28 ಆಗಸ್ಟ್ 2022, 3:06 IST
ಆನೇಕಲ್‌ನ ತಿಮ್ಮರಾಯ ಸ್ವಾಮಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರು
ಆನೇಕಲ್‌ನ ತಿಮ್ಮರಾಯ ಸ್ವಾಮಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರು   

ಆನೇಕಲ್:ಶ್ರಾವಣ ಮಾಸದ ಕಡೆ ಶನಿವಾರದ ಅಂಗವಾಗಿ ತಾಲ್ಲೂಕಿನ ವಿಷ್ಣು ದೇವಾಲಯಗಳಲ್ಲಿ ಅಭಿಷೇಕ, ವಿಶೇಷ ಅಲಂಕಾರ, ಪೂಜೆ ನಡೆಯಿತು. ವಿವಿಧ ಗ್ರಾಮದ ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಪಟ್ಟಣದ ಆದಿದೈವ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದಲೂ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಭಜನೆ, ವಿಷ್ಣು ಸಹಸ್ರನಾಮ ಪಾರಾಯಣ ನಡೆಸಿದರು. ಸಂಜೆ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ಭಕ್ತರು ಸ್ವಾಮಿಯ ಉತ್ಸವ ಮೂರ್ತಿಯನ್ನು ಹೊತ್ತು ಭಕ್ತಿ ಸಮರ್ಪಿಸಿದರು. ಭರತನಾಟ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯಲ್ಲಿ ಶ್ರಾವಣ ಮಾಸದ ಕಡೆ ಶನಿವಾರದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತಾಲ್ಲೂಕಿನ ರಾಮಕೃ‍‍ಷ್ಣಾಪುರದಲ್ಲಿನ ಪ್ರಸನ್ನ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗಿಯಿಂದಲೂ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.

ADVERTISEMENT

ಪಟ್ಟಣದ ಬನ್ನೇರುಘಟ್ಟ ರಸ್ತೆಯ ಶನಿ ಮಹಾತ್ಮ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. ಅನ್ನದಾಸೋಹ ಏರ್ಪಡಿಸಲಾಗಿತ್ತು. ಉಮೇಶ್‌ ಶಾಸ್ತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು.

ಹಲವೆಡೆ ಶ್ರೀನಿವಾಸ ಕಲ್ಯಾಣೋತ್ಸವ: ಶ್ರಾವಣ ಶನಿವಾರದ ಪ್ರಯುಕ್ತ ತಾಲ್ಲೂಕಿನ ಹಲವೆಡೆ ಶ್ರೀನಿವಾಸ ಕಲ್ಯಾಣೋತ್ಸವವನ್ನು ಆಚರಿಸಲಾಯಿತು.

ಭಕ್ತರು ಶ್ರದ್ಧಾ ಭಕ್ತಿಯಿಂದ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ನಡೆಯಿತು. ವಿಶೇಷ ಹೋಮ ಮತ್ತು ಪೂಜೆಗಳು ನಡೆದವು. ತಾಲ್ಲೂಕಿನ ರಾಮಕೃಷ್ಣಾಪುರದ ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಲ್ಯಾಣೋತ್ಸವವನ್ನು ಆಚರಿಸಲಾಯಿತು.

ಪಟ್ಟಣದ ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯ, ಬನ್ನೇರುಘಟ್ಟ ಚಂಪಕಧಾಮ ಸ್ವಾಮಿ ದೇವಾಲಯ, ಹೆಬ್ಬಗೋಡಿ ಅನಂತನಗರದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ, ಸರ್ಜಾಪುರ ಶ್ರೀರಾಮ ದೇವಾಲಯ, ಲಕ್ಷ್ಮೀಕುಂಟೆ ಆಂಜನೇಯ ಸ್ವಾಮಿ ದೇವಾಲಯ, ಸಬ್‌ಮಂಗಲ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.