ದೇವನಹಳ್ಳಿ: ಮುಂಬರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
‘ರಾಜ್ಯದಲ್ಲಿ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಪ್ರಥಮ ಸ್ಥಾನದಲ್ಲಿರುತ್ತವೆ. ಶಿಕ್ಷಣದಲ್ಲಿ ಮುಂದುವರೆದ ಜಿಲ್ಲೆಗಳಾಗಿವೆ. ಆ ಸಾಲಿಗೆ ನಮ್ಮ ಜಿಲ್ಲೆಯು ಸೇರಬೇಕು. ನಮ್ಮ ಜಿಲ್ಲೆಯು ಕೂಡ ಶಿಕ್ಷಣದಲ್ಲಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆ ಸಿಬ್ಬಂದಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.
ಶಿಕ್ಷಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲಾ ರೀತಿಯ ನೆರವು ನೀಡಲು ನಾವು ಸದಾ ಸಿದ್ಧ. ಜಿಲ್ಲೆಯನ್ನು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಜವಾಬ್ದಾರಿ ಶಿಕ್ಷಕರಾದ ನಿಮ್ಮೆಲ್ಲರ ಮೇಲಿದೆ ಎಂದರು.
ಸಿಇಟಿ, ನೀಟ್ ನಂತಹ ಪರಿಕ್ಷೆಗಳಲ್ಲಿ ನಮ್ಮ ಸರ್ಕಾರಿ ಶಾಲೆ ಮಕ್ಕಳು ಸಾಧನೆ ಮಾಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುವ ನೀಡುವ ಹೊಣೆ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇ.ಒ ಶ್ರೀನಾಥ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್, ಜಿಲ್ಲಾ ಮಾಜಿ ಪಂಚಾಯಿತಿ ಸದಸ್ಯ ಮಂಜುನಾಥ್ ಭಾಗವಹಿಸಿದ್ದರು.
ಶಿಕ್ಷಕರ ದಿನಾಚರಣೆ ಹಾಗೂ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆಶಯಗಳಿಗೆ ನಿಜವಾದ ಅರ್ಥ ಸಿಗಬೇಕೆಂದರೆ ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸ ಕಳೆದುಕೊಂಡಿರುವ ಪೋಷಕರಿಗೆ ನಾವೆಲ್ಲರೂ ಸೇರಿ ಸರ್ಕಾರಿ ಶಾಲೆಗಳ ಮೇಲಿರುವ ತಪ್ಪು ಕಲ್ಪನೆ ಹೋಗಲಾಡಿಸಬೇಕು.ಕೋಡಿ ರಂಗಪ್ಪ ಕಸಾಪ ಅಧ್ಯಕ್ಷ ಚಿಕ್ಕಬಳ್ಳಾಪುರ
ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಶಾಲೆ
ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿ ಪಡಿಸಸಲು ಸರ್ಕಾರ ಕ್ರಮ ವಹಿಸಿದೆ. ಜಿಲ್ಲೆಯಲ್ಲಿ 4 ರಿಂದ 5 ಪಬ್ಲಿಕ್ ಶಾಲೆ ಜೊತೆಗೆ 101 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನದಲ್ಲಿ ಸಿಎಸ್‌ಆರ್ ಅನುದಾನದಡಿ ಸರ್ಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸಿದ್ಧತೆ ಆರಂಭವಾಗಿದೆ. ಆಧುನಿಕ ಮೂಲ ಸೌಲಭ್ಯ ಒಳಗೊಂಡಂತೆ ಕಾನ್ವೆಂಟ್ ಮಾದರಿಯ ಶಾಲೆ ನಿರ್ಮಿಸಿ ಅಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಶಿಕ್ಷಣಕ್ರಾಂತಿ ನಾಂದಿ ಹಾಡಿದದ ಮಹನೀಯರು
ಭಾರತ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿರುವ ದೇಶ. ಅಂದಿನ ಕಾಲದಲ್ಲಿ ಶಿಕ್ಷಣ ಸಿಗುತ್ತಿರಲಿಲ್ಲ. ಅಂತಹ ಸಮಯದಲ್ಲಿ ಸಂಪ್ರದಾಯ ಹಾಗೂ ಮೂಢನಂಬಿಕೆ ಹೋಗಲಾಡಿಸಲು ಮಹಾನ್ ವ್ಯಕ್ತಿಗಳಾದ ಬುದ್ಧ ಬಸವಣ್ಣ ಜ್ಯೋತಿಭಾ ಫುಲೆ ಸಾವಿತ್ರಿಬಾಯಿ ಫುಲೆ ಡಾ.ಬಿ.ಆರ್ ಅಂಬೇಡ್ಕರ್ ಉದಯಿಸಿದರು. ಅನಿಷ್ಠ ಪದ್ಧತಿ ದಿಕ್ಕರಿಸಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದರು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡಿ ರಂಗಪ್ಪ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆ ಮಾಡಿದ ಫಲವಾಗಿ ಅವರು ಸತತ ಎರಡು ಬಾರಿ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಶಿಕ್ಷಕರು ಇವರ ಆದರ್ಶ ಪಾಲನೆ ಮಾಡಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.