ADVERTISEMENT

ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 5:00 IST
Last Updated 21 ಅಕ್ಟೋಬರ್ 2021, 5:00 IST
ಆನೇಕಲ್‌ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ತಾಲ್ಲೂಕು ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಚಾಲನೆ ನೀಡಿದರು
ಆನೇಕಲ್‌ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ತಾಲ್ಲೂಕು ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಚಾಲನೆ ನೀಡಿದರು   

ಆನೇಕಲ್:ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಅತ್ಯಂತ ಸಮರ್ಥವಾಗಿ ಬಿಂಬಿಸಿ ರಾಮಾಯಣದಂತಹ ಮೇರುಕೃತಿಯನ್ನು ವಾಲ್ಮೀಕಿ ಮಹರ್ಷಿ ರಚಿಸಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ ಎಂದು ಆನೇಕಲ್‌ ತಾಲ್ಲೂಕು ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ರಾಮಾಯಣ ಕೃತಿಯು ಸಾವಿರಾರು ವರ್ಷಗಳು ಕಳೆದರೂ ಶಾಶ್ವತವಾಗಿ ಉಳಿದಿದೆ. ಇಂತಹ ಮಹಾನ್‌ ಕೃತಿಯನ್ನು ರಚಿಸಿದ ವಾಲ್ಮೀಕಿ ಅವರ ಜಯಂತಿಯ ಮೂಲಕ ಅವರ ಆದರ್ಶಗಳು ಸಮಾಜದ ಭಾಗವಾಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ADVERTISEMENT

ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಸರ್ಕಾರ ಈ ಬಗ್ಗೆ ದಿಟ್ಟ ತೀರ್ಮಾನ ಕೈಗೊಳ್ಳುವ ಮೂಲಕ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಆನೇಕಲ್‌ನಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಾಲ್ಮೀಕಿ ಜಯಂತಿಯನ್ನು ಎಲ್ಲಾ ಇಲಾಖೆಗಳು ಆಚರಿಸಬೇಕು ಎಂದು ಒತ್ತಾಯಿಸಿದರು.

ರಾಜಸ್ವ ನಿರೀಕ್ಷಕ ಆಂಜಿನಪ್ಪ, ಮುಖಂಡರಾದ ವೆಂಕಟೇಶ್, ಸೀನಪ್ಪ, ರಾಮನಾಯಕ, ಉಮೇಶ್‌, ಕುಮಾರ್‌ಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.