
ಆನೇಕಲ್: ಪಟ್ಟಣದ ಹೊಸ ಮಾಧ್ಯಮಿಕ ಶಾಲೆಯ ಆಟದ ಮೈದಾನದಲ್ಲಿ ವೆಂಕಟೇಶ್ ಗುರು ಗೆಳೆಯರ ಬಳಗದಿಂದ ಆಯೋಜಿಸಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಡಿ.25ರಿಂದ ಆರಂಭವಾಗಲಿದೆ.
ಕಬಡ್ಡಿ ಪಂದ್ಯಾವಳಿಯ ಪ್ರಯುಕ್ತ ಆನೇಕಲ್‌ನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆನೇಕಲ್—ಅತ್ತಿಬೆಲೆ ರಸ್ತೆ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದೆ.
ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಬೆಂಗಳೂರು ನಗರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ಪಂದ್ಯಾವಳಿ ನಡೆಯಲಿದೆ. ಹಿರಿಯ ಕಬಡ್ಡಿ ಆಟಗಾರ ಬಿ.ಸಿ.ರಮೇಶ್ ಅವರು ಪಂದ್ಯಾವಳಿ ಉದ್ಘಾಟಿಸಲಿದ್ದು, ಪ್ರೊ ಕಬಡ್ಡಿ ಆಟಗಾರ ಪವನ್ ಸೇರಿದಂತೆ ಒಟ್ಟು 15 ಮಂದಿ ರಾಜ್ಯ ಮತ್ತು ರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿರುವ ಆಟಗಾರರು ಭಾಗಿಯಾಗಲಿದ್ದಾರೆ. ರಾಜ್ಯ ಮಟ್ಟದ ಕಬಡ್ಡಿ ಹಿನ್ನೆಲೆಯಲ್ಲಿ ಕರ್ನಾಟಕ ಎಲ್ಲಾ 30 ಜಿಲ್ಲೆಗಳಿಂದ ತಂಡಗಳು ಭಾಗವಹಿಸುತ್ತಿವೆ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಶಾಂತಿಪುರ ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್ ತಿಳಿಸಿದ್ದಾರೆ.
ವಿಜೇತ ತಂಡಕ್ಕೆ ₹1ಲಕ್ಷ, ರನ್ನರ್ ಅಪ್ ತಂಡಕ್ಕೆ ₹50 ಸಾವಿರ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳಿಗೆ ₹25 ಸಾವಿರ ಬಹುಮಾನ ನೀಡಲಾಗುತ್ತದೆ. ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ಸರ್ವೋತ್ತಮ ಆಟಗಾರರಿಗೆ ವಿಶೇಷ ಬಹುಮಾನ ಇರುತ್ತದೆ. ಬೇರೆ ಜಿಲ್ಲೆಗಳಿಂದ ಬರುವ ಆಟಗಾರರಿಗೆ ಊಟ, ವಸತಿ ಸೇರಿದಂತೆ ಎಲ್ಲಾ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.