ADVERTISEMENT

ಪ್ರಜಾಪ್ರಭುತ್ವ ಬಲಗೊಳಿಸಿ: ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌

ರಾಷ್ಟ್ರೀಯ ಮತದಾರರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:10 IST
Last Updated 26 ಜನವರಿ 2022, 3:10 IST
ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ರೇವಣ್ಣಪ್ಪ ಸೇರಿದಂತೆ ಅಧಿಕಾರಿಗಳು ಇದ್ದರು
ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ರೇವಣ್ಣಪ್ಪ ಸೇರಿದಂತೆ ಅಧಿಕಾರಿಗಳು ಇದ್ದರು   

ದೇವನಹಳ್ಳಿ: 18 ವರ್ಷ ಪೂರೈಸಿದ ಎಲ್ಲ ಯುವಕರು ಮತದಾನ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗಿಯಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಸಲಹೆ ನೀಡಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಅಭಿವೃದ್ಧಿಗೆ ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಭಾಗಿಯಾಗಬೇಕು ಅದು ಮತದಾನದಿಂದ ಮಾತ್ರ ಸಾ‍ಧ್ಯ’ ಎಂದು ಅಭಿಪ್ರಾಯಪಟ್ಟರು.

ಜವಾಬ್ದಾರಿಯುತ ನಾಗರಿಕನಾಗಬೇಕಿದ್ದಲ್ಲಿ, ಮತದಾನ ಮಾಡುವುದು ರೂಢಿಸಿಕೊಳ್ಳಬೇಕು. ಎಲ್ಲರೂ ಹೆಸರು ಮತದಾನ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ADVERTISEMENT

ದೇಶದಲ್ಲಿ ಜಾರಿಯಲ್ಲಿರುವ ಇವಿಎಂ ತಂತ್ರಜ್ಞಾನ ಪ್ರಪಂಚಕ್ಕೆ ಮಾದರಿಯಾಗಿದೆ. ಮತದಾನದ ನಂತರ ಅವರ ಮತವನ್ನು ತಿಳಿಯಲು ವಿವಿ ಪ್ಯಾಟ್‌ ಯಂತ್ರ ಸಹಾಯವಾಗುತ್ತದೆ. ಅದರಲ್ಲಿ ಯಾರಿಗೆ ಮತ ಮಾಡಿದ್ದೇವೆ ಎಂಬುದು ಗೋಚರಿಸುತ್ತದೆ ಎಂದರು.

ಮತದಾನ ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಸೂಕ್ತ ಅಭ್ಯರ್ಥಿಗಳ ಆಯ್ಕೆಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಈ ಕುರಿತು ಎಲ್ಲರಿಗೂ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ರೇವಣ್ಣಪ್ಪ ಸ್ವೀಪ್ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲೆಯಲ್ಲಿನ ಉತ್ತಮ ಬಿ.ಎಲ್.ಓ ಮತ್ತು ಇ.ಎಲ್.ಸಿ ಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ರಾಜ್ಯ ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ, ತೃತೀಯ ಸ್ಥಾನ ಪಡೆದ ಲಾವಣ್ಯ, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೃತಿಕ್ ಅವರನ್ನು ಅಭಿನಂದಿಸಲಾಯಿತು.

ಚುನಾವಣೆ ಶಾಖೆ ಶಿರಸ್ತೇದಾರ್ ಪಿ.ಎಸ್.ಆರ್. ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.