ADVERTISEMENT

ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು: ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2018, 12:57 IST
Last Updated 13 ಅಕ್ಟೋಬರ್ 2018, 12:57 IST
ಅರೇಹಳ್ಳಿಯಲ್ಲಿ ಆಯೋಜಿಸಿದ್ದ ಗ್ರಾಮಸಭೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಉದ್ಘಾಟಿಸಿದರು
ಅರೇಹಳ್ಳಿಯಲ್ಲಿ ಆಯೋಜಿಸಿದ್ದ ಗ್ರಾಮಸಭೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಉದ್ಘಾಟಿಸಿದರು   

ಆನೇಕಲ್: ಗ್ರಾಮಸಭೆಗಳಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗುವುದು ಕಡ್ಡಾಯ. ಆದರೆ 29 ಇಲಾಖೆಗಳ ಪೈಕಿ ಬೆರಳೆಣಿಕೆಯಷ್ಟು ಮಂದಿ ಹಾಜರಾಗಿರುವುದು ಅವರ ಧೋರಣೆಗೆ ಹಿಡಿದ ಕನ್ನಡಿಯಾಗಿದೆ. ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಂ. ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇಹಳ್ಳಿಯಲ್ಲಿ ಆಯೋಜಿಸಿದ್ದ ‘ಗ್ರಾಮ ಸಭೆ’ಯನ್ನುದ್ದೇಶಿಸಿ ಮಾತನಾಡಿದರು.

ಅಧಿಕಾರಿಗಳು ಗ್ರಾಮಸಭೆಗಳಿಗೆ ಹಾಜರಾದರೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ದೊರೆಯುತ್ತದೆ. ಅಧಿಕಾರಿಗಳೇ ಗೈರು ಹಾಜರಾಗುವುದು ಒಳ್ಳೆಯ ಬೆಳವಣಿಗೆಯಲ್ಲ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಗೈರು ಹಾಜರಾಗಿರುವ ಅಧಿಕಾರಿಗಳ ಪಟ್ಟಿಯನ್ನು ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವಂತೆ ಸೂಚನೆ ನೀಡಿದರು.

ADVERTISEMENT

ಪಡಿತರ ಚೀಟಿ ವಿತರಣೆಯ ಗೊಂದಲ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕಾಳಜಿ ವಹಿಸಿ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯೆ ತ್ರಿಪುರಸುಂದರಿ ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಬಳ್ಳೂರು ಮುನಿವೀರಪ್ಪ ಮಾತನಾಡಿ, ಬಳ್ಳೂರು ಗ್ರಾಮದ ಸರ್ವೇ ನಂ.36, 164 ಸ್ಮಶಾನಕ್ಕಾಗಿ ಮೀಸಲಿಟ್ಟಿದ್ದ ಜಮೀನನ್ನು ಒತ್ತುವರಿ ತೆರವು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ನಾರಾಯಣ್, ಸದಸ್ಯ ಮಂಜುನಾಥ್‌ ರೆಡ್ಡಿ, ಬಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಉಪಾಧ್ಯಕ್ಷ ಸತೀಶ್ ರೆಡ್ಡಿ, ಸದಸ್ಯರಾದ ಮಧು, ಸುಮತಿ, ಟಿ.ಟಿ.ಎಸ್. ಮಂಜುನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್‌ ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.