ADVERTISEMENT

ವಿಮಾನ ನಿಲ್ದಾಣದಲ್ಲಿ ಮೂರು ಲಸಿಕಾ ಕೇಂದ್ರ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 5:19 IST
Last Updated 21 ಏಪ್ರಿಲ್ 2021, 5:19 IST
ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಕೋವಿಡ್ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭೇಟಿ ಪರಿಶೀಲನೆ ನಡೆಸಿದರು
ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಕೋವಿಡ್ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭೇಟಿ ಪರಿಶೀಲನೆ ನಡೆಸಿದರು   

ದೊಡ್ಡಬಳ್ಳಾಪುರ: ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಲಸಿಕಾ ಕೇಂದ್ರಕ್ಕೆ ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದರು.

ಭೇಟಿಯ ನಂತರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಈ ಹಿಂದೆ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ತೆರೆಯಲಾದ ಕೋವಿಡ್ ಲಸಿಕಾ ಕೇಂದ್ರದಲ್ಲಿ 115 ಜನರಿಗೆ ಲಸಿಕೆಯನ್ನು ನೀಡಲಾಗಿದೆ. ಈ ಕೇಂದ್ರವನ್ನು ಸ್ಥಗಿತಗೊಳಿಸಿ ಮೂರು ಘಟಕ ಇರುವ ಹೊಸ ಕೋವಿಡ್ ಲಸಿಕಾ ಕೇಂದ್ರವನ್ನು ಪಾರ್ಕಿಂಗ್‌ ಸ್ಥಳದ ಬಳಿ ಸ್ಥಾಪಿಸಲಾಗಿದೆ ಎಂದರು.

ಹೊಸ ಕೇಂದದಲ್ಲಿ ಪತ್ರಿದಿನ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಲಸಿಕೆ ನೀಡುವ ಸಿಬ್ಬಂದಿ, ಡೇಟಾ ಎಂಟ್ರಿ ಆಪರೇಟರ್, ಅವಲೋಕನದ ಕೊಠಡಿಯಲ್ಲಿ ಒಬ್ಬ ಸಿಬ್ಬಂದಿಯಂತೆ ಒಂದು ಘಟಕಕ್ಕೆ ಮೂವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ADVERTISEMENT

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಸೇರಿದಂತೆ 75ರಿಂದ 80 ಸಾವಿರ ಜನರು ಇತರೆ ವಹಿವಾಟು ನಡೆಸುತ್ತಿದ್ದಾರೆ. ಪ್ರತಿದಿನ 300 ಜನರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ವಿಮಾನ ನಿಲ್ದಾಣದ ವಿಪತ್ತು ನಿರ್ವಹಣಾಧಿಕಾರಿ ದೇವಾಸಿಯಾ, ಲಸಿಕಾ ಕೇಂದ್ರ ಸ್ಥಳದ ನಿರ್ವಹಣಾಧಿಕಾರಿ ನಿತಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.