ADVERTISEMENT

ದೇವನಹಳ್ಳಿ| ಶಾಲಾ–ಕಾಲೇಜು ಸುತ್ತ ತಂಬಾಕು ಮಾರಾಟಕ್ಕೆ ಕಡಿವಾಣ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 7:20 IST
Last Updated 15 ಜನವರಿ 2026, 7:20 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಕಣ್ಗಾವಲು–ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಕಣ್ಗಾವಲು–ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರು.   

ದೇವನಹಳ್ಳಿ: ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಸುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಎಚ್ಚರಿಸಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಕಣ್ಗಾವಲು–ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕುಮುಕ್ತ ವಲಯಗಳೆಂದು ಘೋಷಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಶೈಕ್ಷಣಿಕ ಸಂಸ್ಥೆಗಳ ಸುತ್ತ ತಂಬಾಕು ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅನಿರೀಕ್ಷಿತ ದಾಳಿ ನಡೆಸಿ ತಕ್ಷಣ ಕ್ರಮ ಕೈಗೊಳ್ಳಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ. ಪರವಾನಗಿ ಇಲ್ಲದೇ ಮಾರಾಟ ಮಾಡುವವರಿಗೂ ದಂಡ ಹಾಗೂ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.

ADVERTISEMENT

178 ದಾಳಿಗಳು

ಏಪ್ರಿಲ್‌ ನಿಂದ ಅಕ್ಟೋಬರ್‌ವರೆಗೆ ಜಿಲ್ಲಾದ್ಯಂತ 178 ದಾಳಿ ನಡೆಸಲಾಗಿದ್ದು ನಿಯಮ ಉಲ್ಲಂಘನೆ ಸಂಬಂಧ 538 ಪ್ರಕರಣ ದಾಖಲಿಸಿ ₹ 69241 ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಾಯಿ ಕಡಿತ ಪ್ರಕರಣ ಏರಿಕೆ

ಕಳೆದ ವರ್ಷ ಜಿಲ್ಲೆಯಲ್ಲಿ 9967 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು 2024ನೇ ವರ್ಷಕ್ಕಿಂತ ಹೆಚ್ಚಳ ಕಂಡುಬಂದಿದೆ. ನಾಯಿ ಹಾವಳಿ ನಿಯಂತ್ರಣಕ್ಕಾಗಿ ಸಂತಾನಹರಣ ಚಿಕಿತ್ಸೆ ಕೈಗೊಳ್ಳಬೇಕು. ಗ್ರಾಮ ಹಾಗೂ ಪಟ್ಟಣ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸೂಚಿಸಿದರು. ನಾಯಿ ಅಥವಾ ಹಾವು ಕಡಿತವಾದಲ್ಲಿ ಸಾರ್ವಜನಿಕರು ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಕ್ಕಾ ಕೃಷ್ಣಾ ರೆಡ್ಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಹೇಮಾವತಿ ಎ.ವಿ ತಂಬಾಕು ನಿಯಂತ್ರಣಾಧಿಕಾರಿ ಡಾ. ವಿದ್ಯಾರಾಣಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.