ADVERTISEMENT

ಉತ್ತಮ ಕ್ರೀಡಾಪಟು ತರಬೇತುಗೊಳಿಸಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 13:15 IST
Last Updated 6 ಆಗಸ್ಟ್ 2019, 13:15 IST
ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಿದರು
ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಿದರು   

ದೊಡ್ಡಬೆಳವಂಗಲ (ದೊಡ್ಡಬಳ್ಳಾಪುರ): ಸರ್ಕಾರ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದೆ, ಆದಾಗ್ಯೂ ಉತ್ತಮ ಕ್ರೀಡಾಪಟುಗಳು ರೂಪುಗೊಳ್ಳುತ್ತಿಲ್ಲ. ಈ ದಿಸೆಯಲ್ಲಿ ಶಾಲಾ ಹಂತದಿಂದಲೇ ಕ್ರೀಡಾಪಟುಗಳನ್ನು ತರಬೇತುಗೊಳಿಸುವ ಕಾರ್ಯವಾಗಬೇಕಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.

ತಾಲ್ಲೂಕಿನ ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದ ದೊಡ್ಡಬೆಳವಂಗಲ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ಶಾಲಾ ಹಂತದಲ್ಲಿ ಕ್ರೀಡಾಕೂಟ ನಡೆಸಲಾಗುತ್ತಿದೆ. ಆದರೆ ರಾಜ್ಯ ಮಟ್ಟಕ್ಕೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ. ಈ ಬಗ್ಗೆ ಶಿಕ್ಷಕರು ಗಂಭೀರ ಪ್ರಯತ್ನ ನಡೆಸಬೇಕು ಎಂದರು.

ADVERTISEMENT

ತಾಲ್ಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಪ್ರತಿ ಹೋಬಳಿಗೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಸೌಲಭ್ಯ ಪಡೆದುಕೊಂಡು ಉನ್ನತಮಟ್ಟಕ್ಕೇರಬೇಕು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ ಧ್ವಜಾರೋಹಣದ ನೆರವೇರಿಸಿ, ‘ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ. ಯುವ ಜನತೆ ಓದಿನ ಜೊತೆಗೆ ಕ್ರೀಡೆಗಳಿಗೂ ಪ್ರಾಧಾನ್ಯತೆ ನೀಡಬೇಕಿದೆ’ ಎಂದರು.

ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ. ಶಶಿಧರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ, ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಗಂಗಾಧರ, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ, ದೊಡ್ಡಬೆಳವಂಗಲ ಶಾಲೆ ಎಸ್‍ಡಿಎಂಸಿ ಅಧ್ಯಕ್ಷ ತಿಮ್ಮೇಗೌಡ, ಉಮೇಶ್ ಲೋಕೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅಡವೀಶ್, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಸ್. ಸಿದ್ದಗಂಗಯ್ಯ, ಉಪಾಧ್ಯಕ್ಷೆ ಶಾಂತಮ್ಮ, ಕ್ರೀಡಾಕೂಟ ಸಮಿತಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಆರ್. ಪ್ರಹ್ಲಾದ್, ಖಜಾಂಚಿ ಹನುಮಂತರಾಜು, ಕ್ರೀಡಾ ಕಾರ್ಯದರ್ಶಿ ಮಂಜುನಾಥ್, ಮಹೇಶ್ವರಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.