ADVERTISEMENT

ದೊಡ್ಡಬಳ್ಳಾಪುರ: ಲಸಿಕೆ ಕೇಂದ್ರಕ್ಕೆ ವಾಹನ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 3:34 IST
Last Updated 27 ಏಪ್ರಿಲ್ 2021, 3:34 IST
ಕೋವಿಡ್-19 ಲಸಿಕಾ ಕೇಂದ್ರಕ್ಕೆ ಕರೆತರುವ ವಾಹನಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಸೋಮವಾರ ಚಾಲನೆ ನೀಡಿದರು
ಕೋವಿಡ್-19 ಲಸಿಕಾ ಕೇಂದ್ರಕ್ಕೆ ಕರೆತರುವ ವಾಹನಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಸೋಮವಾರ ಚಾಲನೆ ನೀಡಿದರು   

ದೊಡ್ಡಬಳ್ಳಾಪುರ: ಕೋವಿಡ್-19 ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್‌ ಲಸಿಕೆ ಹಾಕುವ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಪ್ರತಿ ಗ್ರಾಮಗಳಿಂದಲೂ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜನರನ್ನು ಕರೆತಂದು ಲಸಿಕೆ ಹಾಕಿಸುವ ಬಸ್‌ ಸೌಲಭ್ಯಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಸೋಮವಾರ ಚಾಲನೆ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿ, ದೊಡ್ಡಬಳ್ಳಾಪುರ ತಾಲ್ಲೂಕು ಕೈಗಾರಿಕಾ ಸಂಘದ ವತಿಯಿಂದ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಸೋಮವಾರದಿಂದ ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಲಸಿಕಾ ಅಭಿಯಾನ ಇಡೀ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ನಡೆಯಲಿದೆ. ಈಗಾಗಲೇ ತಾಲ್ಲೂಕಿನಲ್ಲಿ ಹೆಚ್ಚಿನ ಜನ ಸಂಖ್ಯೆ ಇರುವ ಗ್ರಾಮಗಳಲ್ಲೇ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಕಡಿಮೆ ಜನ ಸಂಖ್ಯೆ ಇರುವ ಗ್ರಾಮಗಳಿಂದ ಜನರನ್ನು ಕರೆತಂದು ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿ ಮತ್ತೆ ಅವರನ್ನು ಮನೆಗಳಿಗೆ ತಲುಪಿಸಲಾಗುತ್ತಿದೆ ಎಂದರು

ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೋವಿಡ್‌ ಲಸಿಕೆ ಹಾಕುವುದರಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ತಜ್ಞ ವೈದ್ಯರು ಕೋವಿಡ್‌ ಲಸಿಕೆಯನ್ನು ಎರಡು ಬಾರಿ ಹಾಕಿಸಿಕೊಳ್ಳುವುದರಿಂದ ಕೊರೊನಾ ಸೋಂಕಿಗೆ ಒಳಗಾಗುವುದು ತಪ್ಪಲಿದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಸೋಂಕು ತಗುಲಿದರೂ ಅದರ ಪರಿಣಾಮ ಕಡಿಮೆ ಇರಲಿದ್ದು, ಪ್ರಾಣಕ್ಕೆ ಕುತ್ತುಬರುವುದು ತಪ್ಪಲಿದೆ ಎನ್ನಲಾಗುತ್ತಿದೆ. ಹೀಗಾಗಿ ಯಾರೊಬ್ಬರು ಸಹ ಲಸಿಕೆ ಹಾಕಿಸಿಕೊಳ್ಳುವುದರಿಂದ ವಂಚಿತರಾಗಬಾರದು ಎಂದು ತಿಳಿಸಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನರೇಂದ್ರಬಾಬು, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಟಿ.ಎಸ್‌.ಶಿವರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.