ADVERTISEMENT

ಸ್ವತಂತ್ರ ಕೆಲಸ| ಮಹಿಳೆಯರಿಗೆ ಸಿಗದ ಅವಕಾಶ: ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 6:40 IST
Last Updated 24 ಜನವರಿ 2026, 6:40 IST
ದೇವನಹಳ್ಳಿ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯಡಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ದೇವನಹಳ್ಳಿ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯಡಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.   

ದೇವನಹಳ್ಳಿ: ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿವೆ. ಸಿಗುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಅವರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ ಹೇಳಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯಡಿ ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಗು ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಬಹುತೇಕ ಮಹಿಳೆಯರು ಸಮಾಜದ ಮುಂದೆ ಬರಲು ಹಿಂಜರಿಯುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಸಿಗಬೇಕಾದ ಸೌಲಭ್ಯಗಳು ಎಲ್ಲರಿಗೂ ತಲುಪುತ್ತಿಲ್ಲ. ಸಂಸತ್ತಿನಲ್ಲಿ ಶೇ 33ರಷ್ಟು ಮೀಸಲಾತಿ ಇದ್ದರೂ, ಪಂಚಾಯಿತಿಗಳಲ್ಲೂ ಸ್ಥಾನ ಇದ್ದರೂ, ಹಲವು ಕಡೆಗಳಲ್ಲಿ ಮಹಿಳೆಯರು ಸ್ವತಂತ್ರವಾಗಿ ಕೆಲಸ ಮಾಡುವ ಅವಕಾಶ ಪಡೆಯುತ್ತಿಲ್ಲ ಎಂದು ಹೇಳಿದರು.

ADVERTISEMENT

ಕೆಲ ಗ್ರಾಮಗಳಲ್ಲಿ ಬಾಲ್ಯವಿವಾಹ, ಬಾಲ್ಯದಲ್ಲೇ ಗರ್ಭಧಾರಣೆ, ಭ್ರೂಣ ಹತ್ಯೆ, ಮಕ್ಕಳ ಶೋಷಣೆ, ಮಕ್ಕಳ ಬಲಿ ಕೊಡುವಂತಹ ಕೆಟ್ಟ ಪದ್ಧತಿಗಳು ನಡೆಯುತ್ತಿವೆ. ಇವೆಲ್ಲವೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳೇ. ಭ್ರೂಣ ಹತ್ಯೆ ನಿಷೇಧ ಕಾಯ್ದೆ ಇದ್ದರೂ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಲಿಂಗ ಪತ್ತೆ ಮಾಡಲಾಗುತ್ತಿದೆ. ಇಂತಹ ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ತಪ್ಪದು ಎಂದು ಎಚ್ಚರಿಸಿದರು.

‘ಸರ್ಕಾರಿ ನೌಕರರಾದ ನಾವು ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಬೇಕು. ಅವರಿಗೆ ರಕ್ಷಣೆ ನೀಡಿ ಸಮಾಜದ ಮುಂದೆ ತರಬೇಕು. ಹೆಣ್ಣು ಮಕ್ಕಳಿಗೆ ಇರುವ ಕಾಯ್ದೆಗಳು, ಕಾನೂನುಗಳು ಮತ್ತು ಸೌಲಭ್ಯಗಳ ಬಗ್ಗೆ ತಿಳಿದು ಮಹಿಳೆಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿ, ದೇಶದ ಸ್ವಾತಂತ್ರ್ಯ ಮತ್ತು ಸಮಾನತೆ ಪ್ರತಿಯೊಬ್ಬ ಹೆಣ್ಣು ಮಗುವಿಗೂ ಸಿಗಬೇಕು ಎಂದರು.

ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದರೆ ಜನರು ತಕ್ಷಣವೇ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬೇಕು. ಇದರಿಂದ ಮಕ್ಕಳ ರಕ್ಷಣೆಗೆ ಸಹಕಾರವಾಗುತ್ತದೆ ಎಂದು ತಿಳಿಸಿದರು.

ಜಿ.ಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕಗಳ ಸಹಯೋಗದಲ್ಲಿ ನಡೆಯಿತು. ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.