ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂನ್ 25 ರಿಂದ ಆರಂಭವಾಗಲಿದ್ದು ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ್ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಮಾರ್ಚ್ ಹಾಗೂ ಮೇ 2020ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಸರ್ಕಾರದ ನಿರ್ದೇಶನಗಳ ಅನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಸಂಪೂರ್ಣ ಸ್ವಚ್ಛತೆ ಹಾಗೂ ಅಂತರ ಕಾಯ್ದುಕೊಳ್ಳುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆ ಕುರಿತು ಸಭೆಯಲ್ಲಿ ಪ್ರಶ್ನಿಸಿದಾಗ, ‘ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಮಾರೇಗೌಡ ಅವರು ಪ್ರತಿಕ್ರಿಯಿಸಿ, ‘6,500 ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಸಲಾಗಿದೆ. ಜಿಲ್ಲೆಯಲ್ಲೂ 13,252 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅನ್ಯ ಜಿಲ್ಲೆಯ 65 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ವಿದ್ಯಾರ್ಥಿಗಳ ನಡುವೆ ಮೂರು ಅಡಿ ಅಂತರ ಕಾಯ್ದುಕೊಳ್ಳಲಾಗುವುದು. ಜಿಲ್ಲಾದ್ಯಂತ 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸೋಂಕು ನಿವಾರಕಗಳನ್ನು ಬಳಸಿ ಸ್ವಚ್ಛಗೊಳಿಸಲಾಗುವುದು. ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ತಾಲ್ಲೂಕು ಕೇಂದ್ರದಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ವಿದೇಶ, ಹೊರ ರಾಜ್ಯಗಳಿಂದ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಸೋಂಕು ಶಂಕಿತರನ್ನು ದೇವನಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆಯಿದೆ. ಆದರೂ ಕೊರೊನಾ ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ
ಲಕ್ಷ್ಮೀನಾರಾಯಣ್ ತಿಳಿಸಿದರು.
ಸಭೆಯಲ್ಲಿ ಉತ್ತರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಅವರು ಜಿಲ್ಲೆಯಲ್ಲಿ ಇದುವರೆಗೆ 20 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಕಂಡುಬಂದಿದ್ದು, ಹೊರ ರಾಜ್ಯ, ಹೊರ ಜಿಲ್ಲೆಯವರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳಲ್ಲಿ 20 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 29 ಪ್ರಕರಣಗಳು ಸಕ್ರಿಯವಾಗಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಬಾಲೇಪುರ ಲಕ್ಷ್ಮೀನಾರಾಯಣ, ಕೆ.ಸಿ.ಮಂಜುನಾಥ್, ಉಪಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.