ADVERTISEMENT

ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2011, 10:45 IST
Last Updated 16 ಫೆಬ್ರುವರಿ 2011, 10:45 IST

ಬೆಳಗಾವಿ: ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸೇರಿದ ಜಮೀನನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಕ್ಕೆ ತುತ್ತಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಅಂತಹ ಜಮೀನು ಪಡೆದುಕೊಂಡವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು. ಜತೆಗೆ ಜಲನಿರ್ಮಲ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಉಮೇಶ ಕತ್ತಿ ಮಂಗಳವಾರ ಇಲ್ಲಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಅಥಣಿ ಹಾಗೂ ಸದಲಗಾ ಪಟ್ಟಣದಲ್ಲಿ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಮಾರಲಾಗಿದೆ. ಈ ಬಗ್ಗೆ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಆಗ್ರಹಿಸಿದರು.

ಬೆಳಗಾವಿ ಹಾಗೂ ಚಿಕ್ಕೋಡಿ ಭಾಗದಲ್ಲಿ ಜಲ ನಿರ್ಮಲ ಯೋಜನೆಯಡಿ ಕೈಗೊಳ್ಳಲಾಗಿರುವ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಅನೇಕ ಕಡೆ ಕುಡಿಯುವ ನೀರು ನೀಡಲಾಗಿಲ್ಲ. ಪರಿಸ್ಥಿತಿ ಹಾಗಿದ್ದರೂ ಸಂಬಂಧಿಸಿದವರಿಗೆ ಹಣ ಪಾವತಿ ಮಾಡಲಾಗಿದೆ ಎಂದು ಶಾಸಕ ಅಭಯಪಾಟೀಲ ಮತ್ತಿತರರು ದೂರಿದರು.

ಜಲ ನಿರ್ಮಲ ಯೋಜನೆಯ ಅನುಷ್ಠಾನದಲ್ಲಿ ಆಗಿರುವ ಅಕ್ರಮಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಬೇಕು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು.ಇದೇ ಅವಧಿಯಲ್ಲಿ ಕುಡಿಯುವ ನೀರಿನ ಯೋಜನೆಗಳು ವಿಫಲವಾಗಿರುವ ಗ್ರಾಮಗಳಲ್ಲಿ ಪರ್ಯಾಯ ಯೋಜನೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಬರುವ ಬೇಸಿಗೆ ಸಂದರ್ಭದಲ್ಲಿ ಆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಾರದು ಎಂದು ಸಚಿವರು ಸೂಚಿಸಿದರು.

ವೇದಿಕೆಯಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಸಂಸದ ರಮೇಶ ಕತ್ತಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಈರಪ್ಪ ಕಡಾಡಿ, ಉಪಾಧ್ಯಕ್ಷೆ ಸುನಿತಾ, ಜಿಲ್ಲಾಧಿಕಾರಿ ಡಾ. ಏಕರೂಪ ಕೌರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.