ADVERTISEMENT

ಗೋಕಾಕ:ಹೆಚ್ಚಿನ ಭದ್ರತೆ ನೀಡಲು ಒತ್ತಾಯ

ಬಿಜೆಪಿಯ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2018, 5:57 IST
Last Updated 6 ಏಪ್ರಿಲ್ 2018, 5:57 IST

ಬೆಳಗಾವಿ: ಅತಿ ಸೂಕ್ಷ್ಮ ವಿಧಾನಸಭಾ ಕ್ಷೇತ್ರವಾಗಿರುವ ಗೋಕಾಕದಲ್ಲಿ ಹೆಚ್ಚುವರಿ ಚುನಾವಣಾ ವೀಕ್ಷಕರನ್ನು ನೇಮಿಸಬೇಕು ಹಾಗೂ ಹೊರ ಜಿಲ್ಲೆಯ ಸಿಬ್ಬಂದಿಗಳನ್ನು ಚುನಾವಣಾ ಕೆಲಸಕ್ಕೆ ಬಳಸಬೇಕು ಎಂದು ಬಿಜೆಪಿಯ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಾಕಷ್ಟು ಪ್ರಭಾವಿಯಾಗಿದ್ದಾರೆ. ಇವರ ಪ್ರಭಾವದಡಿ ಸಿಲುಕಿದ ಅಧಿಕಾರಿಗಳು ಎಷ್ಟರಮಟ್ಟಿಗೆ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬಲ್ಲರು ಎಂದು ಪ್ರಶ್ನಿಸಿದರು.

ಗೋಕಾಕದಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ 300ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ. ಅಲ್ಲದೇ, 5,000 ಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಚುನಾವಣಾಧಿಕಾರಿಗಳು ನಾಮಕಾವಾಸ್ತೆ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೆ ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಮೇ 12ರಂದು ಮತದಾನ ನಡೆಯಲಿದ್ದು, ಚುನಾವಣೆಯು ನ್ಯಾಯಸಮ್ಮತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಕಳೆದ ಹಲವು ವರ್ಷಗಳಿಂದ ಚುನಾವಣೆಗಳಲ್ಲಿ ಅಕ್ರಮ, ದಬ್ಬಾಳಿಕೆ ನಡೆದುಕೊಂಡು ಬರುತ್ತಿದೆ. ಇದನ್ನು ತಡೆಗಟ್ಟಲು ಹೆಚ್ಚಿನ ಬಂದೋಬಸ್ತ್‌ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಈಗಾಗಲೇ ಹಲವು ಬಾರಿ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ನೀಡಿದ್ದೇವೆ. ಚುನಾವಣೆ ಆರಂಭವಾಗುವ ಮೊದಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ವಿರುಪಾಕ್ಷ ಯಲಿಗಾರ, ಮಂಜು ಕಲ್ಲಾರಿ, ಎಚ್‌.ಪಿ. ತಳಕನಾಳ, ಡಿ.ಆರ್‌. ಮುಲ್ಲಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.