ADVERTISEMENT

ಬೆಲೆ ಏರಿಕೆ ವಿರುದ್ಧ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2011, 8:15 IST
Last Updated 20 ಏಪ್ರಿಲ್ 2011, 8:15 IST
ಬೆಲೆ ಏರಿಕೆ ವಿರುದ್ಧ ಕಾರ್ಮಿಕರ ಪ್ರತಿಭಟನೆ
ಬೆಲೆ ಏರಿಕೆ ವಿರುದ್ಧ ಕಾರ್ಮಿಕರ ಪ್ರತಿಭಟನೆ   

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್, ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಮಂಗಳವಾರ ನಗರದಲ್ಲಿ ರ್ಯಾಲಿ ನಡೆಸಿದರು. ಅಗತ್ಯ ಪಡಿತರ ವಸ್ತುಗಳನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ವಿತರಿಸಬೇಕು. ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಬಿಸಿಯೂಟ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಕಾಯಿದೆಯಡಿ ಎಲ್ಲರನ್ನೂ ಒಳಗೊಳ್ಳಲು ತಿದ್ದುಪಡಿ ಮಾಡಬೇಕು. ಖಚಿತ ಸಾಮಾಜಿಕ ಭದ್ರತೆ ಒದಗಿಸುವ ಪರ್ಯಾಯ ಪಿಂಚಣಿ ಯೋಜನೆ ರೂಪಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಗುತ್ತಿಗೆ ನೌಕರರನ್ನು ಕಾಯಂ ಮಾಡಬೇಕು. ಪ್ರತಿ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸಬೇಕು. ಅಸಂಘಟಿತ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಕಾರ್ಮಿಕರಿಗೆ ಭವಿಷ್ಯ ನಿಧಿ, ವೈದ್ಯಕೀಯ ಸೌಲಭ್ಯ, ಅಪಘಾತ ಮತ್ತು ಮರಣ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮ ಪಂಚಾಯಿತಿ ಕರ ವಸೂಲಿಗಾರರ ನೇಮಕಾತಿಯಲ್ಲಿ ಮೆರಿಟ್ ಪದ್ಧತಿ ಕೈಬಿಡಬೇಕು. ಕಾರ್ಯದರ್ಶಿಗೆ ಗ್ರೇಡ-2 ಹುದ್ದೆಗೆ ಬಡ್ತಿ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ 25 ಲಕ್ಷ ರೂ ಅನುದಾನ ನೀಡಬೇಕು. ಬ್ಯಾಂಕ್ ಖಾತೆಗಳ ಮೂಲಕ ವೇತನ ಕಾಯ್ದಿರಿಸಬೇಕು ಎಂದು ಆಗ್ರಹಿಸಿದರು.

ಪಂಚಾಯಿತಿ ನೌಕರರ ನಿವೃತ್ತಿ ವಯಸ್ಸನ್ನು 60ಕ್ಕೆ ನಿಗದಿ ಮಾಡಬೇಕು. ಗಣಕಯಂತ್ರ ಸಿಬ್ಬಂದಿಯನ್ನು ಪಂಚಾಯಿತಿ ನೌಕರರೆಂದು ಪರಿಗಣಿಸಬೇಕು. ಹಮಾಲಿ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಹಾಗೂ ವಿಮೆ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್. ಕಾಂಬಳೆ, ಪ್ರಧಾನ ಕಾರ್ಯದರ್ಶಿ ಗಿರೀಶ ಶೆಟ್ಟಿ, ಅಂಗನವಾಡಿ ಸಂಘಟನೆಯ ಅಧ್ಯಕ್ಷೆ ಸುಜಾತಾ ಬೆಳಗಾಂವಕರ, ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ದುರ್ಗಪ್ಪ ತಹಶೀಲ್ದಾರ ಹಮಾಲಿ ನೌಕರರ ಸಂಘದ ಅಧ್ಯಕ್ಷ ಆರ್.ಎಚ್. ಹವಗಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.