ಬೆಳಗಾವಿ: ಬೇಡಿಕೆಗಳನ್ನು ಶೀಘ್ರವೇ ಈಡೇರಿಸದಿದ್ದರೆ ಇದೇ 6ರಂದು ಚಕ್ಕಡಿ ಗಾಡಿಗಳೊಂದಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕವು ಎಚ್ಚರಿಕೆ ನೀಡಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಫೆ. 23ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಅಪ್ಪಾಸಾಬ ದೇಸಾಯಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಅನ್ಬುಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
`ಸಾಲದ ಸಮಸ್ಯೆಗಳನ್ನು ಪರಿಹರಿಸುವಂತೆ 2008ರಿಂದ ಸುಮಾರು 200ಕ್ಕೂ ಹೆಚ್ಚು ಸಲ ಅಧಿಕಾರಿಗಳು, ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಹೀಗಿದ್ದರೂ ಸಹ ಸರ್ಕಾರ ನಮ್ಮ ನೋವಿಗೆ ಸ್ಪಂದಿಸುತ್ತಿಲ್ಲ. ಅದರಿಂದ ಬೇಸತ್ತು ಹತ್ತಾರು ರೈತರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಪ್ಪಾಸಾಬ ದೇಸಾಯಿ ತಿಳಿಸಿದರು.
ಆತ್ಮಹತ್ಯೆ ಪ್ರಕರಣಗಳನ್ನು ಪರಿಶೀಲಿಸಿದ ಹಿಂದಿನ ತಹಶೀಲ್ದಾರ ಭೀಮಾ ನಾಯ್ಕ ಹಾಗೂ ಹಿಂದಿನ ಜಿಲ್ಲಾಧಿಕಾರಿ ಡಾ. ಏಕ್‌ರೂಪ್ ಕೌರ್, ನಮ್ಮ ಬೇಡಿಕೆಗಳು ಸಮಂಜಸವಾಗಿದೆ ಎಂದು ಪರಿಗಣಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರೂ ಇದನ್ನು ಅದು ಪುರಸ್ಕರಿಸಿಲ್ಲ. ವಿಧಾನಸಭೆಯಲ್ಲಿ ಕುಳಿತುಕೊಳ್ಳುವ ಜನಪ್ರತಿನಿಧಿಗಳಿಗೆ ನಮ್ಮ ಅಳಲು ಕೇಳಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಸಾಲದ ಸುಳಿಯಲ್ಲಿ ಸಿಲುಕಿ ನಾವು ಬದುಕುವ ಸ್ಥಿತಿಯಲ್ಲಿ ಇಲ್ಲ. ಸೊಸೈಟಿ, ಬ್ಯಾಂಕ್‌ಗಳು ಹಾಕಿರುವ ಮೊಕದ್ದಮೆಗಳನ್ನು ಎದುರಿಸಲು ವಕೀಲರಿಗೆ ಶುಲ್ಕ ನೀಡಲು ನಮ್ಮ ಬಳಿ ಹಣವೂ ಇಲ್ಲ. ಹೀಗಾಗಿ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕಲಗೌಡ ಪಾಟೀಲ, ಶಿದಲಿಂಗ ಮುದ್ದಣ್ಣವರ, ಮಾರುತಿ ಕಡೇಮನಿ, ಕಲುನಿ ಕಣಬರಕರ, ವೈಜು ಲೂಮ್ಯಾಚೆ, ನಿಂಗಾಣಿ ಲಾಡ್, ದುಂಡಪ್ಪ ಹೊಸಪೇಟ, ಶಿವಾಜಿ ಬುರ್ಲೆ, ಚಂದ್ರು ರಾಜಾಜಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.