ADVERTISEMENT

ವಿದ್ಯುತ್ ದರ ಏರಿಕೆ: ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2011, 10:45 IST
Last Updated 30 ಅಕ್ಟೋಬರ್ 2011, 10:45 IST

ಬೆಳಗಾವಿ: ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ ಸರಾಸರಿ 28 ಪೈಸೆ ಹೆಚ್ಚಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳದ ಜಿಲ್ಲಾ ಘಟಕವು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಟಗಾರ, “ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿನ ವಿದ್ಯುತ್ ಅಭಾವದಿಂದ ರೈತರು, ಉದ್ಯಮಿಗಳು ಹಾಗೂ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈಗ ವಿದ್ಯುತ್ ದರ ಏರಿಸುವ ಶಾಕ್ ನೀಡುವ ಮೂಲಕ ಗಾಯದ ಮೇಲೆ ಬರೆ ಎಳೆಯುತ್ತಿದೆ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ 2009ರಲ್ಲಿ ಪ್ರತಿ ಯೂನಿಟ್ ಮೇಲೆ 35 ಪೈಸೆ ಹೆಚ್ಚಳ ಮಾಡಿದ್ದ `ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ~, 2010ರಲ್ಲಿ 30 ಪೈಸೆ ಏರಿಸಿತ್ತು. ಇದೀಗ ಮತ್ತೆ ಸರಾಸರಿ 28 ಪೈಸೆ ಹೆಚ್ಚಿಸುತ್ತಿದೆ. ಇದರಿಂದ ಮಧ್ಯಮ ಹಾಗೂ ಕೆಳ ವರ್ಗದ ಜನರು ಜೀವನ ನಡೆಸಲು ಕಷ್ಟವಾಗಲಿದೆ.

ಹೀಗಾಗಿ ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ವಿದ್ಯುತ್ ದರ ಇಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ವಿದ್ಯುತ್ ಕಡಿತ ಮಾಡಿರುವುದರಿಂದ ಬರಗಾಲದಿಂದ ತತ್ತರಿಸುತ್ತಿರುವ ರೈತರ ಸ್ಥಿತಿ ಚಿಂತಾಜನಕವಾಗಿದೆ.

ವಿದ್ಯುತ್ ಉತ್ಪಾದನಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ವಿದ್ಯುತ್ ಸಮಸ್ಯೆಗೆ ಕಲ್ಲಿದ್ದಲಿನ ಕೊರತೆಯ ಕಾರಣ ನೀಡಿ ದಿಕ್ಕು ತಪ್ಪಿಸುತ್ತಿದೆ. ವಿದ್ಯುತ್ ಖರೀದಿ ಕುರಿತು ಈ ಹಿಂದೆ ಮಾಡಿಕೊಂಡ ಒಪ್ಪಂದಗಳನ್ನು ನಿರ್ಲಕ್ಷಿಸಿ, ಹೆಚ್ಚು ದರ ನೀಡಿ ವಿದ್ಯುತ್ ಖರೀದಿಸುತ್ತಿದೆ.

ಜನರಿಗೆ ಕಡಿಮೆ ಬೆಲೆಯಲ್ಲಿ ವಿದ್ಯುತ್ ನೀಡುತ್ತೇವೆ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ, ಮೇಲಿಂದ ಮೇಲೆ ವಿದ್ಯುತ್ ದರ ಏರಿಸುವ ಮೂಲಕ ಜನರನ್ನು ವಂಚಿಸುತ್ತಿದೆ. ಹೀಗಾಗಿ ಈ ಕುರಿತು ಸರ್ಕಾರ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದರು.
“
ಕಳೆದ ಮೂರು ವರ್ಷಗಳಿಂದ ಸರಿಯಾಗಿ ವಿದ್ಯುತ್ ನಿರ್ವಹಣೆ ಮಾಡದಿರುವ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಈಗ ವಿದ್ಯುತ್ ದರ ಏರಿಕೆಗೆ ಮುಂದಾಗಿದೆ. ಇದನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಜೆಡಿಎಸ್ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಸಿದ್ದಾರೆ.

ನಗರದ ಚನ್ನಮ್ಮ ವೃತ್ತದಿಂದ ಮೆರವಣಿಗೆಯಲ್ಲಿ ತೆರಳಿದ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀಕಾಂತ ಪಾಟೀಲ, ಮಂಜುಳಾ ದೇವಿ, ಶಿವಾನಂದ ರಾಚಣ್ಣವರ, ಮುಕ್ತಾರ್ ಇನಾಮದಾರ ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.