ADVERTISEMENT

ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 6:07 IST
Last Updated 19 ಜೂನ್ 2018, 6:07 IST
ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದ ಮುಖಂಡರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದ ಮುಖಂಡರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆದರು.

‘ರಾಜ್ಯ ಸರ್ಕಾರ ನೆಪಗಳನ್ನು ಹೇಳಿ ಸಾಲ ಮನ್ನಾವನ್ನು ಮುಂದೂಡುತ್ತಿರುವುದು ಸರಿಯಲ್ಲ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಬೇಕು. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದನ್ನು ನೆನಪು ಮಾಡಿಕೊಳ್ಳಬೇಕು. ಸಂಕಷ್ಟದಲ್ಲಿರುವ ಅನ್ನದಾತರ ಹೊರೆ ಇಳಿಸಿ, ಆತ್ಮಹತ್ಯೆ ಪ್ರಕರಣಗಳಿಗೆ ಅಂತ್ಯ ಹಾಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಮುಂಗಾರು ಹಂಗಾಮು ಆರಂಭವಾಗಿದ್ದು, ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಹಣ ಇಲ್ಲದ ರೈತರು ಕಂಗಾಲಾಗಿದ್ದಾರೆ. ಬ್ಯಾಂಕ್‌, ಸಹಕಾರ ಸೊಸೈಟಿಗಳಲ್ಲಿ ಸಾಲ ದೊರೆಯುತ್ತಿಲ್ಲ. ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬಾಕಿಯೂ ಪಾವತಿ ಆಗಿಲ್ಲ. ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಸಲಾಗಿದೆ. ಆದರೆ, ರೈತರಿಗೆ ಈವರೆಗೂ ಹಣ ಪಾವತಿಯಾಗಿಲ್ಲ’ ಎಂದು ಸಂಘದ ಅಧ್ಯಕ್ಷ ಈರನಗೌಡ ಪಾಟೀಲ ದೂರಿದರು.

ADVERTISEMENT

‘ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುವಂತೆ ವ್ಯವಸ್ಥೆ ಮಾಡಬೇಕು. ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ರೈತರಿಗೆ ಪರಿಹಾರ ನೀಡಬೇಕು’ ಎಂದು ಅವರು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಶಿವನಗೌಡ ಗೌಡರ, ಅಣ್ಣಪ್ಪ ಹಳ್ಳೂರ, ಶಿವನಗೌಡ ಪಾಟೀಲ, ಉದಯ ಪಾಟೀಲ, ರಾಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.