ಅಥಣಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಆಯ್ದ ಹತ್ತು ತಂಡಗಳು ಉತ್ತಮ ಪ್ರದರ್ಶನ ನೀಡಿ ಸಭಿಕರ ಗಮನ ಸೆಳೆದವು.
ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಕನ್ನಡ ಚಿತ್ರರಂಗದ ದಿಗ್ಗಜರ ಕಲೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಉತ್ತಮ ಪ್ರದರ್ಶನ ನೀಡಿದ ರಡ್ಡೆರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಸಕ ಲಕ್ಷ್ಮಣ ಸವದಿ ಘೋಷಿಸಿದ ₹1ಲಕ್ಷ ನಗದು ಬಹುಮಾನ ಗೆದ್ದು ಸಂಭ್ರಮಿಸಿದರು.
ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ‘ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳೂ ಉತ್ತಮ ಪ್ರತಿಭೆ ಹೊಂದಿದ್ದಾರೆ ಎಂಬುದಕ್ಕೆ ಈ ವೇದಿಕೆಯ ಸಾಕ್ಷಿಯಾಗಿದೆ’ ಎಂದರು.
ಪಟ್ಟಣದ ಶಾರದಾ ಮಾತಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ ₹50 ಸಾವಿರ ನಗದು, ಪ್ರಮಾಣಪತ್ರ ಮತ್ತು ಸಿ.ಎಸ್.ಕಿತ್ತೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತೃತೀಯ ಬಹುಮಾನ ₹25 ಸಾವಿರ ನಗದು ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ತಹಶೀಲ್ದಾರ್ ದಿನೇಶಕುಮಾರ ಮೀನಾ ಧ್ವಜಾತೋಹಣ ನೆರವೇರಿಸಿದರು.
ಪಟ್ಟಣದ ವಿವಿಧ ಶಾಲೆಗಳ ಶಾಲಾ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಆಯ್ದ 10 ತಂಡಗಳ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಬಸವರಾಜ ಹೆಗ್ಗನಾಯಕ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ತಾಲ್ಲೂಕು ಪಂಚಾಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಗ್ರೇಡ್ 2 ತಹಶೀಲ್ದಾರ್ ಶ್ರೀಶೈಲ್ ಗುಡಮೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿ, ಪುರಸಭೆ ಮುಖ್ಯ ಅಧಿಕಾರಿ ಅಶೋಕ ಗುಡಿಮನಿ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.