ADVERTISEMENT

ಖಾಸಗಿ ಆಸ್ಪತ್ರೆಗಳ ಶೇ.50 ಹಾಸಿಗೆ ಕೋವಿಡ್ ರೋಗಿಗಳಿಗೆ ಮೀಸಲು: ಬೆಳಗಾವಿ ಡಿ.ಸಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 14:52 IST
Last Updated 26 ಏಪ್ರಿಲ್ 2021, 14:52 IST
   

ಬೆಳಗಾವಿ: ‘ಜಿಲ್ಲೆಯಲ್ಲಿ ಆಯುಷ್ಮಾನ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 3,925 ಹಾಸಿಗೆಗಳು ಲಭ್ಯವಿದ್ದು, ಇದರ ಶೇ.50ರಷ್ಟನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತದ ಸುಪರ್ದಿಗೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಜ್ಞರ ಸಲಹಾ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಹಾಸಿಗೆಗಳಲ್ಲಿ 2ಸಾವಿರ ಹಾಸಿಗೆಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕಾಗುತ್ತದೆ. ಆದರೆ, ಇದುವರೆಗೆ 641 ಬೆಡ್‌ಗಳನ್ನು ಮಾತ್ರ ಮೀಸಲಿಡಲಾಗಿದೆ. ಸದ್ಯಕ್ಕೆ ಅವು ಸಾಕಾಗಬಹುದು. ಆದರೆ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ವಾರದೊಳಗೆ ಉಳಿದವನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟು ಜಿಲ್ಲಾಡಳಿತಕ್ಕೆ ಒದಗಿಸಬೇಕು’ ಎಂದು ತಿಳಿಸಿದರು.

ADVERTISEMENT

ಆಕ್ಸಿಜನ್ ಕೊರತೆ ಇಲ್ಲ:

‘ಜಿಲ್ಲೆಯಲ್ಲಿ ಸದ್ಯಕ್ಕೆ ವೈದ್ಯಕೀಯ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನದಲ್ಲಿರಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಆಕ್ಸಿಜನ್ ಏಜೆನ್ಸಿ ಮತ್ತು ಪೂರೈಕೆದಾರರನ್ನು ಗುರುತಿಸಿ ಇನ್ನೂ ಹೆಚ್ವಿನ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

‘ಆಕ್ಸಿಜನ್ ಪೂರೈಕೆದಾರರನ್ನು ಗುರುತಿಸಿ ಹೆಚ್ಚುವರಿ ಆಕ್ಸಿಜನ್ ಖರೀದಿ ಪ್ರಕ್ರಿಯೆಯನ್ನು ನಡೆಸುವ ಜವಾಬ್ದಾರಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಆ ಸಮಿತಿಯವರು ನಿಪ್ಪಾಣಿ ಹಾಗೂ ಬೆಳಗಾವಿಯಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿ ಹೆಚ್ಚುವರಿ ಆಕ್ಸಿಜನ್ ಪಡೆಯಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ರಾಜ್ಯದ ಕೆಲವು ಕಡೆಗಳಲ್ಲಿ ವರದಿ ಆಗಿರುವಂತೆ ಜಿಲ್ಲೆಯಲ್ಲಿ ರೆಮ್‌ಡಿಸಿವಿರ್ ಕೊರತೆ ಇಲ್ಲ. ವೈದ್ಯರ ಶಿಫಾರಸಿನಂತೆ ಅಗತ್ಯವಿರುವ ರೋಗಿಗಳಿಗೆ ಪೂರೈಕೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದ ತಂಡ ರಚಿಸಲಾಗಿದೆ. ಆದರೆ, ಆ ಔಷಧಿಯು ಕಾಳಸಂತೆಯಲ್ಲಿ ಮಾರಾಟ ಆಗುವುದನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಬೆಳಗಾವಿ ನಗರದಲ್ಲಿರುವ ಚಿತಾಗಾರಗಳಲ್ಲಿ ಬೆಳಿಗ್ಗೆ 8ರಿಂದ ರಾತ್ರಿ 9ವರೆಗೆಗೆ ಶವಸಂಸ್ಕಾರಕ್ಕೆ ಅವಕಾಶವಿದೆ. ಆದರೆ ರಾತ್ರಿ 9ರ ನಂತರ ಶವಸಂಸ್ಕಾರಕ್ಕೆ ತೊಂದರೆ ಆಗುತ್ತಿರುವ ಕುರಿತು ಸಭೆಯಲ್ಲಿ ಪ್ರಸ್ತಾಪವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಈ ವಿಷಯ ಕುರಿತು ಮಹಾನಗರ ಪಾಲಿಕೆಯ ಆಯುಕ್ತರೊದಿಗೆ ಚರ್ಚಿಸಿ ನಿಯಮಾವಳಿ ಪ್ರಕಾರ ಅವಕಾಶ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.

‘ಕೋವಿಡ್-19 ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸರ್ಕಾರವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಹಾಗೂ ಖಾಸಗಿ ಆಸ್ಪತ್ರೆಗಳು ಈ ಕಾರ್ಯದಲ್ಲಿ ಕೈಜೋಡಿಸುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕು’ ಎಂದು ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ. ಮುನ್ಯಾಳ, ಬಿಮ್ಸ್ ಅಧಿಕಾರಿಗಳು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು, ಜಿಲ್ಲಾ ತಜ್ಞರ ಸಲಹಾ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.