ಅಶೋಕ ಪೂಜಾರಿ
ಬೆಳಗಾವಿ: ‘ಸುವರ್ಣ ವಿಧಾನಸೌಧವನ್ನು ಉತ್ತರ ಕರ್ನಾಟಕದ ಆಡಳಿತ ಶಕ್ತಿಕೇಂದ್ರವನ್ನಾಗಿ ಮಾಡಬೇಕೆಂಬ ಬೇಡಿಕೆ ಇನ್ನೂ ಈಡೇರಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತಗೊಂಡಿದೆ. ಸರ್ಕಾರದಿಂದ ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿದರೆ ನಾವು ಪ್ರತ್ಯೇಕ ರಾಜ್ಯ ಕೇಳಬೇಕಾಗುತ್ತದೆ’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಮುಖಂಡ ಅಶೋಕ ಪೂಜಾರಿ ಎಚ್ಚರಿಕೆ ಕೊಟ್ಟರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದ ಜನಪ್ರತಿನಿಧಿಗಳು ಮತ್ತು ಸಚಿವರು ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿ ಕೇಂದ್ರವನ್ನಾಗಿ ಮಾಡುವಲ್ಲಿ ವಿಫಲರಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಕಲ್ಯಾಣ ಕರ್ನಾಟಕದ ಜನಪ್ರತಿನಿಧಿಗಳು ಆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸೆಪ್ಟೆಂಬರ್ 23ರಂದು ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.
‘2012ರಲ್ಲಿ ಸುವರ್ಣ ವಿಧಾನಸೌಧ ಉದ್ಘಾಟನೆಯಾದಾಗಿನಿಂದ, ಇದನ್ನು ಉತ್ತರ ಕರ್ನಾಟಕದ ಆಡಳಿತಾತ್ಮಕ ಶಕ್ತಿ ಕೇಂದ್ರವಾಗಿ ಮಾಡಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ ಜನಪ್ರತಿನಿಧಿಗಳು ಬೇಡಿಕೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ, ನಾವು ಪ್ರತ್ಯೇಕ ರಾಜ್ಯ ಕೇಳಬೇಕಾಗುತ್ತದೆ’ ಎಂದು ಹೇಳಿದರು.
‘ಉ.ಕ ಅಭಿವೃದ್ಧಿಗಾಗಿ ನಾವು ಹೋರಾಟ ಮಾಡಿದ ನಂತರವೇ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಅಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಲ್ಲಿ ರಾಜ್ಯ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಸಿತು. ನಂತರ ಇಲ್ಲಿಯೇ ಸುವರ್ಣ ವಿಧಾನಸೌಧ ನಿರ್ಮಾಣಗೊಂಡಿತು. ಇದನ್ನು ಶಕ್ತಿಕೇಂದ್ರವನ್ನಾಗಿ ಮಾಡಬೇಕೆಂದು 100ಕ್ಕೂ ಹೆಚ್ಚು ಶ್ರೀಗಳು ಪ್ರತಿಭಟನೆ ನಡೆಸಿದರೂ ಬೇಡಿಕೆ ಈಡೇರಲಿಲ್ಲ. ಈ ವಿಷಯದಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆ ಕಾಡುತ್ತಿದೆ’ ಎಂದು ದೂರಿದರು.
‘ಜನಪ್ರತಿನಿಧಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿ ಬಳಿ ನಿಯೋಗ ಕರೆದೊಯ್ದು, ಬೇಡಿಕೆಗಳ ಈಡೇರಿಕೆಗೆ ಮತ್ತೆ ಪ್ರಯತ್ನಿಸುತ್ತೇವೆ. ಸೆ.23ರಂದು ನಡೆಯುವ ಪ್ರತಿಭಟನೆ ಸಂದರ್ಭ ನಮ್ಮ ಬೇಡಿಕೆಗಳನ್ನು ಪುನರುಚ್ಚರಿಸುತ್ತೇವೆ. ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ, ಪ್ರತ್ಯೇಕ ರಾಜ್ಯದ ಬೇಡಿಕೆಗೆ ವೇಗ ಸಿಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.