ADVERTISEMENT

ಬೆಳಗಾವಿ| ನಕಲಿ ಪಿಎಚ್.ಡಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 8:10 IST
Last Updated 20 ಫೆಬ್ರುವರಿ 2026, 8:10 IST
ಬೆಳಗಾವಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ರಾಜ್ಯದ ವಿವಿಧ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ನೀಡಿ ಅತಿಥಿ ಉಪನ್ಯಾಸಕ ಹಾಗೂ ಕಾಯಂ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಕಾಲೇಜು ರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅವರಿಗೆ ಮನವಿ ಸಲ್ಲಿಸಿದರು.

‘ಪಿಎಚ್‌.ಡಿ ಪ್ರಮಾಣ‍ಪತ್ರ ಸೇರಿ ವಿವಿಧ ದಾಖಲೆಗಳು ನಕಲಿಯಾಗಿವೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬರುತ್ತಿದೆ. ಬಾಗಲಕೋಟೆ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂಥ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಆತಂಕಗೊಂಡ ಕೆಲವರು ಕೆಲಸವನ್ನೇ ತೊರೆದಿದ್ದಾರೆ. ಆದರೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿಲ್ಲ’ ಎಂದು ದೂರಿದರು. 

ADVERTISEMENT

‘ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸೃಷ್ಟಿಸುವ ಜಾಲ ಪತ್ತೆಹಚ್ಚುವ ಜತೆಗೆ, ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ  ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಪ್ರಥಮಗೌಡ ಪಾಟೀಲ, ಪ್ರಜ್ವಲ ಅಣ್ಣಿಗೇರಿ, ದರ್ಶನ ವಡ್ಡರಳ್ಳಿ, ಮೇಘಾ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.