ADVERTISEMENT

ಮುಂದುವರಿದ ಅಂಗನವಾಡಿಕಾರ್ಯಕರ್ತೆಯರ ಧರಣಿ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 12:43 IST
Last Updated 6 ಜುಲೈ 2019, 12:43 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನ ಜಿಲ್ಲಾ ಘಟಕದ ಸದಸ್ಯರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರವೂ ಧರಣಿ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನ ಜಿಲ್ಲಾ ಘಟಕದ ಸದಸ್ಯರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರವೂ ಧರಣಿ ನಡೆಸಿದರು   

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನ ಜಿಲ್ಲಾ ಘಟಕದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರವೂ ಧರಣಿ ನಡೆಸಿದರು.

ಫೆಡರೇಷನ್‌ನ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಒತ್ತಾಯಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ನಾಗೇಶ ಸಾತೇರಿ ಮಾತನಾಡಿ, ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಎರಡು ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಸಂಜೆವರೆಗೂ ಧರಣಿ ನಡೆಸಿದ್ದೆವು. ಶನಿವಾರವೂ ಕೂಡ ಇಡೀ ದಿನ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಹೇಳಿದರು.

ADVERTISEMENT

‘ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೇ ಜುಲೈ 30 ಹಾಗೂ 31ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ’ ಎಂದು ತಿಳಿಸಿದರು.

ಕೇಂದ್ರದ ವಿರುದ್ಧ ಆಕ್ರೋಶ:ಸಂಘದ ಉಪಾಧ್ಯಕ್ಷೆಯಲ್ಲಾಬಾಯಿ ಶೀಗಿಹಳ್ಳಿ ಮಾತನಾಡಿ, ‘ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಅನುಷ್ಟಾನದಲ್ಲಿ ಅಂಗನವಾಡಿ ನೌಕರರ ಪಾತ್ರ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಸರ್ಕಾರ ನಿರೀಕ್ಷೆಯನ್ನು ಹುಸಿಯಾಗಿಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಅಂಗನವಾಡಿಯ ನಿವೃತ್ತ ನೌಕರರಿಗೆ ಪ್ರತಿ ತಿಂಗಳು 6,000 ಪಿಂಚಣಿ ನೀಡಬೇಕು. ಈ ಬಗ್ಗೆ ಪಸಕ್ತ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು.

ಪಿಂಚಣಿ ಕೊಡಿ:‘ಅಂಗನವಾಡಿ ಕೇಂದ್ರಗಳು ಹಾಗೂ ಮಿನಿ ಅಂಗನವಾಡಿ ಕೇಂದ್ರಗಳನ್ನು ಇಂಗ್ಲಿಷ್‌ ನರ್ಸರಿ ಶಾಲೆಗಳನ್ನಾಗಿ ಪರಿವರ್ತಿಸಬೇಕು.ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸೇವಾ ಅವಧಿಯ ಆಧಾರದ ಮೇಲೆ ಗೌರವಧನ (ವೇತನ) ನೀಡಬೇಕು. ನಿವೃತ್ತ ನೌಕರರಿಗೆ ಪಿಂಚಣಿ ಹಣ ಕೊಡಬೇಕು’ ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಉಪಾಧ್ಯಕ್ಷೆ ಮೀನಾಕ್ಷಿ ಕೋಟಗಿ, ಸದಸ್ಯರಾದಸಾವಿತ್ರಿ.ಡಿ., ಅನಿತಾ ಕಾಮನ್ನಾಚೆ ಸೇರಿ ನೂರಾರು ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.