ADVERTISEMENT

ಬೆಳಗಾವಿ: ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 2:50 IST
Last Updated 10 ಜುಲೈ 2025, 2:50 IST
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ವಿವಿಧ ಸಂಘಟನೆಯವರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು ಪ್ರಜಾವಾಣಿ ಚಿತ್ರ
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ವಿವಿಧ ಸಂಘಟನೆಯವರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು ಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಮಿಕರು, ರೈತರು, ನರೇಗಾ ಕೂಲಿಕಾರರು, ಆಶಾ, ಅಂಗನವಾಡಿ ಮತ್ತು ಬಿಸಿಯೂಟ ನೌಕರರು ಮತ್ತಿತರರು ಪಾಲ್ಗೊಂಡರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ADVERTISEMENT

‘ಗುತ್ತಿಗೆ, ಹೊರಗುತ್ತಿಗೆ ಸೇರಿ ಅನೌಪಚಾರಿಕ ವಲಯದ ಎಲ್ಲ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ಪ್ರತಿದಿನ 8 ತಾಸಿಗೆ ಮೀರದಂತೆ ಕಾರ್ಮಿಕರ ಕೆಲಸದ ಅವಧಿ ನಿಗದಿಪಡಿಸಬೇಕು. ನರೇಗಾ ಯೋಜನೆಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ನಗರ ವ್ಯಾಪ್ತಿಗೂ ಯೋಜನೆಯನ್ನು ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.

‘ಆಶಾ, ಅಂಗನವಾಡಿ, ಬಿಸಿಯೂಟ ಮತ್ತು ಇತರೆ ಯೋಜನೆಗಳ ನೌಕರರಿಗೆ ಸೇವಾಭದ್ರತೆ ಒದಗಿಸಬೇಕು. ಅದು ಜಾರಿಯಾಗುವವರೆಗೆ ಕನಿಷ್ಠ ವೇತನ ನೀಡಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌, ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಮತ್ತಿತರ ಸಂಘಟನೆಯವರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಮುಖಂಡರಾದ ಜಿ.ವಿ.ಕುಲಕರ್ಣಿ, ಲಕ್ಷ್ಮಣ ಜಡಗನ್ನವರ, ಶಾರದಾ ದಾಬಡೆ, ಮಂದಾ ನೇವಗಿ, ಲಕ್ಕಪ್ಪ ಬಿಜ್ಜನ್ನವರ, ರಾಜೀವ್‌ ಗಾಣಗಿ ಇತರರಿದ್ದರು.

ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯರವರೆಗೆ ವಿವಿಧ ಸಂಘಟನೆಯವರು ಪ್ರತಿಭಟನಾ ಮೆರವಣಿಗೆ ನಡೆಸಿದರು    ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.