ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಟಿಕೆಟ್ ಖಾತ್ರಿಪಡಿಸಲಾಗಿದೆ. ಕಳೆದ ಅವಧಿಗೆ ಮೊದಲಬಾರಿಗೆ ಸ್ಪರ್ಧಿಸಿ ಗೆದ್ದ ಅವರು, ಎರಡನೇ ಬಾರಿಗೆ ಪಕ್ಷದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಮೂರು ತಿಂಗಳ ಹಿಂದಿನಿಂದಲೂ ಅಣ್ಣಾಸಾಹೇಬ ಅವರು ಚುನಾವಣಾ ಪ್ರಚಾರ ಶುರು ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ವಿವಿಧ ಚಟುವಟಿಕೆ, ಕ್ರೀಡೆ ಆಯೋಜಿಸಿ ದೊಡ್ಡ ಮೊತ್ತದ ಬಹುಮಾನಗಳನ್ನೂ ನೀಡುತ್ತ ಬಂದಿದ್ದಾರೆ. ಕ್ಷೇತ್ರದಲ್ಲಿ ಪ್ರತಿದಿನವೂ ಸಂಚರಿಸಿ ಮತ ಕೇಳುವುದು ಮುಂದುವರಿಸಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಅವರು, ‘2024ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಕ್ಕಿದ್ದು ಖಷಿ ತಂದಿದೆ. ಕಳೆದ 5 ವರ್ಷಗಳಲ್ಲಿ ಚಿಕ್ಕೋಡಿ ಸಂಸದನಾಗಿ ಮೋದಿ ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಜನರಿಗೆ ತಲುಪಿಸಿದ್ದೇನೆ. ಪ್ರತಿಯೊಂದು ಗ್ರಾಮದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಮತ್ತೊಮ್ಮೆ ಸ್ಪರ್ಧಿಸಲು ಅವಕಾಶವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ನನಗೆ ಆಶೀರ್ವಾದ ಮಾಡಿದ್ದಾರೆ’ ಎಂದರು.
‘ಮೋದಿ ಅವರು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕು ಎಂಬ ಬಗ್ಗೆ ಕ್ಷೇತ್ರದ ಜನರು ಉತ್ಸುಕರಾಗಿದ್ದಾರೆ. ತನಗೆ ಟಿಕೆಟ್ ಲಭಿಸಿದ್ದು ಕ್ಷೇತ್ರದಾದ್ಯಂತ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ’ ಎಂದೂ ಹೇಳಿದರು.
ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲು ರಮೇಶ ಕತ್ತಿ, ಅಮಿತ್ ಪ್ರಭಾಕರ ಕೋರೆ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರು. ಆದರೆ, ಪಕ್ಷ ಮತ್ತೊಮ್ಮೆ ಅಣ್ಣಾಸಾಹೇಬ ಅವರನ್ನೇ ಕಣಕ್ಕಿಳಿಸಿದೆ.
ಪ್ರಬಲ ಲಿಂಗಾಯತ ಸಮುದಾಯದವರಾದ ಅಣ್ಣಾಸಾಹೇಬ ಜೊಲ್ಲೆ ಕ್ಷೇತ್ರದಲ್ಲಿ ತಮ್ಮದೇ ಆದ ಮತ ಪ್ರಾಬಲ್ಯ ಹೊಂದಿದ್ದಾರೆ. ಸಹಕಾರ, ಶಿಕ್ಷಣ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲೂ ಅವರು ಛಾಪು ಮೂಡಿಸಿದ್ದು ಅವರಿಗೆ ನೆರವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.