ಗೋಕಾಕ: ಶಿಕ್ಷಣದ ಕೊರತೆಯಿಂದಾಗಿ ಬಾಲಕಾರ್ಮಿಕ ಪದ್ಧತಿ ಇನ್ನೂ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ, ಅರಿವಿನ ಕೊರತೆಯಿಂದಾಗಿಯೇ ಇಂತಹ ಪದ್ಧತಿಗಳು ಇಂದಿಗೂ ಜೀವಂತವಾಗಿವೆ’ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಗೋಕಾಕ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಉಮೇಶ ಅತ್ನೂರೆ ಹೇಳಿದರು.
ಗುರುವಾರ ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಹಾಗೂ ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕೇವಲ ಕಾರ್ಯಕ್ರಮ ಆಯೋಜಿಸಿದರೆ ಸಾಲದು. ಅದನ್ನು ಮೀರಿ ಮಾಡಬೇಕಾದ ಹಲವು ಕೆಲಸಗಳಿವೆ. ವಿವಿಧ ಕಾರಣಗಳಿಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರ್ತಿಸಿ ಶಿಕ್ಷಣ ನೀಡಿದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲು ಸಾಧ್ಯʼ ಎಂದರು.
ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಪ್ರಕಾರ ಅಪರಾಧ. ಇದಕ್ಕಾಗಿ, ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನಿನಡಿ ಶಿಕ್ಷೆ ವಿಧಿಸಲು ಅವಕಾಶವಿದೆ. ಎಲ್ಲೆಡೆ ಬಾಲ ಕಾರ್ಮಿಕ ಪದ್ಧತಿ ಅನುಸರಿಸುವವರ ವಿರುದ್ಧ ನಿಗಾ ಇಡಬೇಕು ಎಂದು ಅಭಿಪ್ರಾಯ ಪಟ್ಟರು.
ವೇದಿಕೆಯಲ್ಲಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಚೈತ್ರಾ ಕುಲಕರ್ಣಿ, 1ನೇ ಅಧಿಕ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಅಭಿನಯ, ವಕೀಲರ ಸಂಘದ ಅಧ್ಯಕ್ಷ ಸುಭಾಷ್ಚಂದ್ರ ಬಿ.ಪಾಟೀಲ್, ಮುಖ್ಯೋಪಾಧ್ಯಾಯ ಬಿ.ಆರ್.ಚಿಪ್ಪಲಕಟ್ಟಿ, ದೈಹಿಕ ಶಿಕ್ಷಣ ಅಧಿಕಾರಿ ಎಲ್.ಕೆ. ತೊರನಗಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.