₹10 ಸಾವಿರ ಗೌರವಧನ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಂಗಳವಾರ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು
ಬೆಳಗಾವಿ: ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತೆಯರು ಸುರಿಯುವ ಮಳೆಯಲ್ಲೂ ಹೋರಾಟ ನಡೆಸಿದರು.
ಇಲ್ಲಿನ ಅಂಬೇಡ್ಕರ್ ಉದ್ಯಾನದಲ್ಲಿ ಸಮಾವೇಶಗೊಂಡ ಕಾರ್ಯಕರ್ತೆಯರು, ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ತಾಸುಗಳ ಕಾಲ ಸಂಚಾರ ಬಂದ್ ಮಾಡಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.
ಗುಲಾಬಿ ಬಣ್ಣದ ಉಡುಗೆಯಲ್ಲಿ ಬಂದ ಕಾರ್ಯಕರ್ತೆಯರು, ಕೆಂಪು ಧ್ವಜ, ವಿವಿಧ ಫಲಕಗಳನ್ನು ಪ್ರದರ್ಶಿಸಿ ತಮ್ಮ ಹಕ್ಕು ಪ್ರತಿಪಾದಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಾಕಿದ ಶಾಮಿಯಾನದಲ್ಲಿ ಕುಳಿತು ಇಡೀ ದಿನ ಧರಣಿ ನಡೆಸಿದರು.
ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ಜಡಗನ್ನವರ ಮಾತನಾಡಿ, ‘ಜನವರಿಯಲ್ಲಿ ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಹಾಗಾಗಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಹೊರಡಿಸಿದ ಆದೇಶವನ್ನು ತಾವೇ ಜಾರಿ ಮಾಡುತ್ತಿಲ್ಲ. ಇದು ಅನ್ಯಾಯದ ಧೋರಣೆ. ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಸೇವೆ ನಿರ್ಲಕ್ಷ್ಯ ಮಾಡುತ್ತಿದೆ. ಈ ಕೂಡಲೇ ಆದೇಶ ಜಾರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಕಿಡಿ ಕಾರಿದರು.
‘20 ಆಶಾಗಳಿಗೆ ಒಬ್ಬರಂತೆ ಒಬ್ಬರನ್ನು ಕಳೆದ 10 ವರ್ಷಗಳಿಂದ ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಳ್ಳಲಾಗಿದೆ. ಇಂಥ 2,000 ಮಂದಿಯನ್ನು ದಿಢೀರನೆ ತೆಗೆದು ಹಾಕಲಾಗಿದೆ. ಇವರನ್ನು ಸೇವೆಯಲ್ಲಿ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.
ಲಕ್ಷ್ಮಣ ಜಡಗನ್ನವರ, ಗೀತಾ ರಾಯಗೋಳ, ರೂಪಾ ಅಂಗಡಿ ಇತರರಿದ್ದರು.
₹10 ಸಾವಿರ ಗೌರವಧನ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಂಗಳವಾರ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸ್ಥಳದಲ್ಲೇ ಆಶಾ ಕಾರ್ಯಕರ್ತೆಯರು ಉಪಾಹಾರ ಸೇವಿಸಿದರು.
ಪ್ರಮುಖ ಬೇಡಿಕೆಗಳೇನು?
* ಏಪ್ರಿಲ್ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು.
* ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು.
* ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು.
* ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
* ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ₹1,000 ಪ್ರೋತ್ಸಾಹಧನ ಹೆಚ್ಚಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.