ADVERTISEMENT

ಬೆಳಗಾವಿ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಮಳೆ–ಚಳಿ ಮಧ್ಯೆಯೂ ಮೂರು ದಿನ ಹೋರಾಟ, ಕೊನೇ ದಿನ ಸಂಚಾರ ತಡೆದು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 3:20 IST
Last Updated 15 ಆಗಸ್ಟ್ 2025, 3:20 IST
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಗುರುವಾರ ಮಾನವ ಸರಪಳಿ ನಿರ್ಮಿಸಿ  ಪ್ರತಿಭಟನೆ ನಡೆಸಿದರು  ಪ್ರಜಾವಾಣಿ ಚಿತ್ರ
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಗುರುವಾರ ಮಾನವ ಸರಪಳಿ ನಿರ್ಮಿಸಿ  ಪ್ರತಿಭಟನೆ ನಡೆಸಿದರು  ಪ್ರಜಾವಾಣಿ ಚಿತ್ರ   

ಬೆಳಗಾವಿ: ಮಾಸಿಕ ₹10 ಸಾವಿರ ಗೌರವಧನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮೂರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಗುರುವಾರ ತಾತ್ಕಾಲಿಕವಾಗಿ ಅಂತ್ಯಗೊಂಡಿತು. 

ಸತತ ಮಳೆ ಮಧ್ಯೆಯೂ ಜಿಲ್ಲಾಧಿಕಾರಿ ಕಚೇರಿ ಎದುರಿನ ಟೆಂಟ್‌ನಲ್ಲಿ ನೂರಾರು ಕಾರ್ಯಕರ್ತೆಯರು ಕುಳಿತು ಧರಣಿ ನಡೆಸಿದರು. ಅಲ್ಲಿಯೇ ಅಡುಗೆ ಮಾಡಿ, ರಸ್ತೆಯಲ್ಲೇ ಕುಳಿತು ಊಟ ಮಾಡಿದರು.

ಗುರುವಾರ ರಾಣಿ ಚನ್ನಮ್ಮನ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಸಂಚಾರ ತಡೆದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲಿ’ ಎಂದು ಘೋಷಣೆ ಕೂಗಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ಜಡಗನ್ನವರ, ‘ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಆಶಾ ಕಾರ್ಯಕರ್ತೆಯರನ್ನು ಯಾವ ಕಾರಣಕ್ಕೂ ಕೆಲಸದಿಂದ ತೆಗೆಯುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟಿದ್ದಾರೆ. ಆದರೆ, ಮಾಸಿಕ ₹10 ಸಾವಿರ ಗೌರವಧನ ನೀಡುವ ಬಗ್ಗೆ ಸ್ಪಷ್ಟವಾಗಿ ತಿಳಿಸಿಲ್ಲ. ಶೀಘ್ರವೇ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಅದರಲ್ಲಿ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

ಮುಖಂಡ ರಾಜೀವ್‌ ಗಾಣಗಿ, ‘ಮಳೆ–ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಆದರೆ, ಒಬ್ಬ ಸಚಿವರೂ ಪ್ರತಿಭಟನಾ ಸ್ಥಳಕ್ಕಾಗಮಿಸಿ ಬೇಡಿಕೆ ಆಲಿಸಿಲ್ಲ. ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡಲು ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.

Highlights - ಧರಣಿ ಸ್ಥಳದಲ್ಲೇ ಅಡುಗೆ ಮಾಡಿ ಊಟ ಮಾಡಿದ ಕಾರ್ಯಕರ್ತೆಯರು ಬೇಡಿಕೆ ಆಲಿಸಲು ಬಾರದ ಸಚಿವರು: ಆಕ್ರೋಶ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಂದಿನ ಹೋರಾಟದ ಬಗ್ಗೆ ತೀರ್ಮಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.