ADVERTISEMENT

ಚಿಕ್ಕೋಡಿ ಜಿಲ್ಲೆ ರಚನೆಗಾಗಿನ ಹೋರಾಟದ ರೂವಾರಿ ಬಿ.ಆರ್‌. ಸಂಗಪ್ಪಗೋಳ ನಿಧನ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 15:43 IST
Last Updated 23 ಏಪ್ರಿಲ್ 2021, 15:43 IST
ಬಿ.ಆರ್. ಸಂಗಪ್ಪಗೋಳ
ಬಿ.ಆರ್. ಸಂಗಪ್ಪಗೋಳ   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಚಿಕ್ಕೋಡಿ ಜಿಲ್ಲೆ ರಚನೆಗಾಗಿ ನಡೆಯುತ್ತಿದ್ದ ಹೋರಾಟದ ರೂವಾರಿ ಬಿ.ಆರ್. ಸಂಗಪ್ಪಗೋಳ (76) ಅವರು ಕೋವಿಡ್‌ನಿಂದಾಗಿ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಂಜೆ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು, ಸೊಸೆಯರು ಮತ್ತು ಮೊಮ್ಮಕ್ಕಳು ಇದ್ದಾರೆ.

ವಾರದ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಚಿಕ್ಕೋಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಅವರನ್ನು ಬೆಳಗಾವಿಗೆ ದಾಖಲಿಸಲಾಗಿತ್ತು.

ADVERTISEMENT

ತಾಲ್ಲೂಕಿನ ಮಜಲಟ್ಟಿ ಗ್ರಾಮದ ಅವರು, 20ನೇ ವಯಸ್ಸಿನಲ್ಲೇ ಸಾರ್ವಜನಿಕ ರಂಗ ಪ್ರವೇಶಿಸಿದ್ದರು. 1972ರಲ್ಲಿ ಸಂಸ್ಥಾ ಕಾಂಗ್ರೆಸ್‌ನ ಚಿಕ್ಕೋಡಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಬಳಿಕ ಜನತಾ ಪಕ್ಷದ ಚಿಕ್ಕೋಡಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. 6 ವರ್ಷಗಳವರೆಗೆ ಜನತಾ ಪಕ್ಷ ಬೆಳಗಾವಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿದ್ದರು. ಗೋವಾ ಚಳವಳಿಯಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು. ಜೆಪಿ ಚಳವಳಿಯಲ್ಲಿ ಭಾಗವಹಿಸಿದ್ದರು.

1983ರಲ್ಲಿ ಜನತಾ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಆಗಿದ್ದರು. ಕೆಎಸ್‌ಆರ್‌ಟಿಸಿ ನಿರ್ದೇಶಕರಾಗಿದ್ದರು. 1987ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದರು. ರಾಮಕೃಷ್ಣ ಹೆಗಡೆ, ಎಚ್‌.ಡಿ. ದೇವೇಗೌಡ, ಎಸ್.ಆರ್. ಬೊಮ್ಮಾಯಿ, ಸಿದ್ದರಾಮಯ್ಯ ಮೊದಲಾದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರಕಾಶ ಹುಕ್ಕೇರಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ತಾಲ್ಲೂಕಿನ ಮಳೆಯಾಶ್ರಿತ ಪ್ರದೇಶದ ಕೆರೆಗಳನ್ನು ತುಂಬಿಸಲು ಶ್ರಮಿಸಿದ್ದರು. ಸ್ವಗ್ರಾಮ ಮಜಲಟ್ಟಿಗೆ ಸರ್ಕಾರದಿಂದ ಪ್ರೌಢಶಾಲೆ ಪಿಯು ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊದಲಾದವುಗಳನ್ನು ಮಂಜೂರು ಮಾಡಿಸಿಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚಿಕ್ಕೋಡಿ ಜಿಲ್ಲೆಗಾಗಿ ಹಲವು ವರ್ಷಗಳಿಂದ ಹೋರಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.