
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಬೆಳಗಾವಿ ಜಿಲ್ಲೆಯ ವಿಭಜಿಸಿ ಬೈಲಹೊಂಗಲ ಕೇಂದ್ರವಾಗಿ ಹೊಸ ಜಿಲ್ಲೆ ರಚಿಸುವಂತೆ ಆಗ್ರಹಿಸಿ, ಜಿಲ್ಲಾ ಹೋರಾಟ ಸಮಿತಿ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಶನಿವಾರ ಕರೆ ನೀಡಿದ್ದ ‘ಬೈಲಹೊಂಗಲ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿತ್ತು. ಶಾಲೆ, ಕಾಲೇಜು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಮಾರುಕಟ್ಟೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು. ವಕೀಲರು ನ್ಯಾಯಾಲಯ ಕಲಾಪಗಳಿಂದ ದೂರ ಉಳಿದರು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು.
‘ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ ಅವರಂಥ ಮಹಾನ್ ವ್ಯಕ್ತಿಗಳು ಹುಟ್ಟಿದ ನೆಲವಿದು. ಬ್ರಿಟಿಷ್ ಆಳ್ವಿಕೆ ಕಾಲದಿಂದಲೂ ಉಪ ವಿಭಾಗವಾಗಿದೆ. ಹೊಸ ಜಿಲ್ಲೆ ರಚಿಸುವಂತೆ ದಶಕಗಳಿಂದಲೂ ಹೋರಾಟ ಮುಂದುವರಿದಿದೆ. ಸರ್ಕಾರ ಕಿವಿಗೊಟ್ಟಿಲ್ಲ’ ಎಂದು ಹೊಸೂರ ಮಡಿವಾಳೇಶ್ವರ ಮಠದ ಗಂಗಾಧರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಶಿವರಂಜನ ಬೋಳನ್ನವರ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಅನೇಕರು ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.