ಬೆಳಗಾವಿಯಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಪ್ರತಿಮೆಗೆ ಲಕ್ಷ್ಮಿ ಹೆಬ್ಬಾಳಕರ ಮಾಲಾರ್ಪಣೆ ಮಾಡಿದರು
ಪ್ರಜಾವಾಣಿ ಚಿತ್ರ
ಬೆಳಗಾವಿ: ‘ಸಾಮಾಜಿಕ ಪರಿಕಲ್ಪನೆ ಇಟ್ಟುಕೊಂಡಿದ್ದ ಬಸವಣ್ಣನವರು ಜಾತಿರಹಿತ ಸಮಾಜ ಬಯಸಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ನಾವು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗದೆ, ಜಾತಿಗಳ ಹಿಂದೆ ಬಿದ್ದಿದ್ದೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೇಸರ ವ್ಯಕ್ತಪಡಿಸಿದರು.
ಇಲ್ಲಿನ ಬಸವೇಶ್ವರ ಉದ್ಯಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬಸವಣ್ಣನವರ ತತ್ವಾದರ್ಶಗಳು ಕೇವಲ ಆಚರಣೆಗೆ ಮೀಸಲಾಗಬಾರದು. ಬದಲಿಗೆ ಪ್ರತಿಯೊಬ್ಬರೂ ಅವುಗಳನ್ನು ಅನುಸರಿಸಬೇಕು. ಬಸವಣ್ಣನವರ ಪ್ರತಿ ವಚನದಲ್ಲಿ ಜೀವನದ ಸಾರವಿದೆ. ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗಬೇಕು. ಯಾವುದೇ ಜಾತಿ ದ್ವೇಷಿಸಬಾರದು’ ಎಂದರು.
ಉಪನ್ಯಾಸ ನೀಡಿದ ಸಾಹಿತಿ ಬಸವರಾಜ ಜಗಜಂಪಿ, ‘ಒಂದೇ ಜಾತಿಗೆ ಸೀಮಿತವಾಗದ ಬಸವಣ್ಣನವರು ಭಾವೈಕೈದ ಬೀಜ ಬಿತ್ತಿದ್ದರು. ಸಕಲರಿಗೆ ಲೇಸನ್ನೇ ಬಯಸಿದ್ದರು. ಪರಸ್ಪರರನ್ನು ನಾವು ಅರಿತು ಬದುಕಿದರೆ ಜೀವನ ನೆಮ್ಮದಿಯಿಂದ ಸಾಗುತ್ತದೆ ಎಂದು ಅವರು ಹೇಳಿದ್ದರು. ಹಾಗಾಗಿ ನಾವೆಲ್ಲರೂ ಪರಸ್ಪರರನ್ನು ಅರಿತು ಬಾಳಬೇಕು’ ಎಂದರು.
‘ಮಹಿಳೆಯರಿಗೆ ಸಮಾನತೆ ಸಾರಿದ ಬಸವಣ್ಣ ಅನುಭವ ಮಂಟಪ ನಿರ್ಮಿಸಿ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಮೇ 4ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಿಸಿ, ಮೆರವಣಿಗೆ ನಡೆಸುತ್ತೇವೆ’ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಈರಣ್ಣ ದಯನ್ನವರ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ, ಬಸವೇಶ್ವರ ಉದ್ಯಾನದಲ್ಲಿನ ಬಸವೇಶ್ವರ ಪುತ್ಥಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.