ರಾಮದುರ್ಗ: ‘ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೀಡಲು ಶಪಥ ಮಾಡಬೇಕು. ಸ್ವಚ್ಛ ಪರಿಸರಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಹೇಳಿದರು.
ಬ್ಯಾಂಕ್ ಆಫ್ ಬರೋಡಾದ 118ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿನ ಗುರುಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನಮ್ಮ ಮನೆ ಹಾಗೂ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು. ಮನೆಯ ಸುತ್ತ ಸಸಿ ಬೆಳೆಸಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯಬಾರದು’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಮಾತನಾಡಿ, ‘ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಬೇಕು. ಪರಿಸರದ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು’ ಎಂದು ತಿಳಿಸಿದರು.
ಬ್ಯಾಂಕಿನ ವ್ಯವಸ್ಥಾಪಕ ಹನಮಂತರಾಯ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, ‘ರಾಮದುರ್ಗದಲ್ಲಿ ಬ್ಯಾಂಕ್ ಆರಂಭಗೊಂಡ ಒಂದು ವರ್ಷದಲ್ಲೇ ಒಟ್ಟು ₹30 ಕೋಟಿ ವಹಿವಾಟು ನಡೆಸಿದೆ’ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡುರಂಗ ಜಟಗನ್ನವರ ಮಾತನಾಡಿದರು.
ಇದಕ್ಕೂ ಮುನ್ನ ನಡೆದ ಪರಿಸರ ಜಾಗೃತಿ ಮೆರವಣಿಗೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಅಧಿಕಾರಿಗಳು, ಪತ್ರಕರ್ತರು, ವ್ಯಾಪಾರಸ್ಥರು, ಬ್ಯಾಂಕಿನ ಗ್ರಾಹಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.