ಖಾನಾಪುರ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿರುವುದಾಗಿ ಶಾಸಕ ವಿಠ್ಠಲ ಹಲಗೇಕರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾವು ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದು, ಕಳೆದ ನಾಲ್ಕು ಅವಧಿಯಿಂದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಮಾಜಿ ಶಾಸಕ ಅರವಿಂದ ಪಾಟೀಲ ತಾಲ್ಲೂಕಿನ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇಮಾಭಿವೃದ್ಧಿಯ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವ ಕಾರಣ ಅವರ ವಿರುದ್ಧ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿರುವುದಾಗಿ ಘೋಷಿಸಿದ್ದಾರೆ.
ಅರವಿಂದ ಅವರು ಕಳೆದ ಅವಧಿಯಲ್ಲಿ ಅವರಿಗೆ ಮತದಾನ ಮಾಡದ ಸಂಘಗಳ ಪತ್ತು ಮಂಜೂರಿ ಮಾಡದೇ ರೈತರಿಗೆ ದ್ರೋಹ ಬಗೆದಿದ್ದಾರೆ. ಬಾಲಚಂದ್ರ ಜಾರಕಿಹೊಳಿ ತಾಲ್ಲೂಕಿನ ಕಾರ್ಯಕ್ರಮಕ್ಕೆ ಬಂದಾಗ ಆ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸದೇ ಅವಮಾನಿಸಿದ್ದಾರೆ. ಅಲ್ಲದೇ ಬಹಿರಂಗ ಸಮಾರಂಭಗಳಲ್ಲಿ ತಾವೇ ಕ್ಷೇತ್ರದ ಮುಂದಿನ ಶಾಸಕರೆಂದು ಘೋಷಿಸಿಕೊಳ್ಳುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಲು ತಾವು ಮುಂದಾಗಿರುವುದಾಗಿ ಹಲಗೇಕರ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.