ADVERTISEMENT

ಮತಗಟ್ಟೆಗಳಲ್ಲಿನ ವ್ಯವಸ್ಥೆ ಪರಿಶೀಲಿಸಿದ ಡಿ.ಸಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 14:04 IST
Last Updated 2 ಸೆಪ್ಟೆಂಬರ್ 2021, 14:04 IST
ಬೆಳಗಾವಿಯಲ್ಲಿ ಮಹಾನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಗುರುವಾರ ವೀಕ್ಷಿಸಿದರು
ಬೆಳಗಾವಿಯಲ್ಲಿ ಮಹಾನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಗುರುವಾರ ವೀಕ್ಷಿಸಿದರು   

ಬೆಳಗಾವಿ: ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮತದಾನ ನಡೆಯಲಿದ್ದು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ನಗರದ‌ ವಿವಿಧೆಡೆ ಸಂಚರಿಸಿ ಮತಗಟ್ಟೆಗಳನ್ನು ಹಾಗೂ ಅಲ್ಲಿನ ಮೂಲಸೌಕರ್ಯಗಳನ್ನು ಗುರುವಾರ ಪರಿಶೀಲಿಸಿದರು.

ಮಸ್ಟರಿಂಗ್ ಕೇಂದ್ರವಾಗಿರುವ ನಗರದ ಬಿ.ಕೆ. ಮಾಡೆಲ್ ಪ್ರೌಢಶಾಲೆಯಿಂದ ಬೆಳಿಗ್ಗೆಯಿಂದಲೇ ಚುನಾವಣಾ ಸಿಬ್ಬಂದಿ ಮತ ಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ತೆಗೆದುಕೊಂಡು ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ಗುರುವಾರ ಸಂಜೆ ವೇಳೆಗೆ ತೆರಳಿದರು. ಈ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಅಂತಿಮ ಕ್ಷಣದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ‍ಪಡೆದರು. ಮತಯಂತ್ರಗಳ ವ್ಯವಸ್ಥೆ, ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ವೀಕ್ಷಿಸಿದರು.

ಮತಗಟ್ಟೆಗೆ ನಿಯೋಜಿತ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಚರ್ಚಿಸಿದ ಅವರು, ‘ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು’ ಎಂದು ಸೂಚನೆ ನೀಡಿದರು.

ADVERTISEMENT

‘ಪ್ರತಿ ಮತಗಟ್ಟೆಗೆ ಐವರು ಚುನಾವಣಾ ಅಧಿಕಾರಿ/ಸಿಬ್ಬಂದಿ ನಿಯೋಜಿಸಲಾಗಿದೆ. ಶೇ.20 ಹೆಚ್ಚುವರಿ ಅಧಿಕಾರಿ/ಸಿಬ್ಬಂದಿ ಸೇರಿದಂತೆ ಒಟ್ಟು 2,500 ಜನರನ್ನು ಚುನಾವಣಾ ಕಾರ್ಯಕ್ಕೆ‌ ನಿಯೋಜಿಸಲಾಗಿದೆ. ಚುನಾವಣೆಯನ್ನು ನ್ಯಾಯಸಮ್ಮತವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಗರದ ಎಲ್ಲ ಅರ್ಹ‌ ಮತದಾರರು ತಪ್ಪದೇ ಮತದಾನ ಮಾಡಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.