ADVERTISEMENT

ಬೆಳಗಾವಿ ಉಪ ಚುನಾವಣೆ ಟಿಕೆಟ್: ಸತೀಶ ಸೇರಿ 7–8 ಹೆಸರು ಚರ್ಚೆ - ಎಂ.ಬಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 12:48 IST
Last Updated 21 ನವೆಂಬರ್ 2020, 12:48 IST
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಕುರಿತು ಕಾಂಗ್ರೆಸ್ ಮುಖಂಡರು ಶನಿವಾರ ನಡೆದ ಸಭೆಯಲ್ಲಿ ಚರ್ಚಿಸಿದ ಬಳಿಕ ಹೊರ ಬಂದ ಕ್ಷಣಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಕುರಿತು ಕಾಂಗ್ರೆಸ್ ಮುಖಂಡರು ಶನಿವಾರ ನಡೆದ ಸಭೆಯಲ್ಲಿ ಚರ್ಚಿಸಿದ ಬಳಿಕ ಹೊರ ಬಂದ ಕ್ಷಣಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕೆಪಿಸಿಸಿ ರಚಿಸಿದ ಸಮಿತಿಯಿಂದ ಮೊದಲ ಸಭೆ ನಡೆಸಿದ್ದೇವೆ. ಶಾಸಕ ಸತೀಶ ಜಾರಕಿಹೊಳಿ ಸೇರಿ ಏಳೆಂಟು ಮಂದಿಯ ಹೆಸರುಗಳು ಚರ್ಚೆಗೆ ಬಂದಿವೆ. ವಾರದಲ್ಲಿ ಮತ್ತೊಮ್ಮೆ ಸಮಾಲೋಚಿಸಿ, ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗುವುದು’ ಎಂದು ಶಾಸಕರೂ ಆಗಿರುವ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಸಭೆ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಈ ಕ್ಷೇತ್ರದ ಚುನಾವಣೆ ನಡೆಯಲಿದೆ. ಪಕ್ಷದ ಎಲ್ಲ ಶಾಸಕರು, ಮಾಜಿ ಶಾಸಕರು, ಮುಖಂಡರ ಜೊತೆಯಲ್ಲೂ ಚರ್ಚಿಸಲಾಗುವುದು. ಸದ್ಯ ಎಲ್ಲ ನಾಯಕರೂ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ' ಎಂದರು.

ADVERTISEMENT

‘ಮುಖಂಡರೆಲ್ಲರೂ ಒಗ್ಗಟ್ಟಾಗಿ ಮತ್ತು ಸಮರ್ಥವಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ. ಎಲ್ಲರೂ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಕ್ಷದ ನಾಯಕರಲ್ಲಿ ಒಗ್ಗಟ್ಟಿದೆ. ವಿಧಾನಸಭಾ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಿಸುವ ಕಾರ್ಯವೂ ನಡೆಯಲಿದೆ. ಸದ್ಯ ಏಳೆಂಟು ಮಂದಿ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಮುಂದೆ ಈ ಪಟ್ಟಿ 10ರಿಂದ 15ಕ್ಕೆ ಹೋಗಬಹುದು. ಅವರಲ್ಲಿ ಸಮರ್ಥರ ಹೆಸರನ್ನು ಶಿಫಾರಸು ಮಾಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಪಕ್ಷದ ನಿರ್ಧಾರಕ್ಕೆ ಬದ್ಧ

‘ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

‘ಸಮಿತಿ ಸದಸ್ಯರು ಬಿಟ್ಟು ಮುಖಂಡರು, ಕಾರ್ಯಕರ್ತರು ಕೂಡ ಇದ್ದಾರೆ. ಅವರ ಅಭಿಪ್ರಾಯವೂ ಮುಖ್ಯವಾಗುತ್ತದೆ. ನಾವು ಹತ್ತು ದಿನ ಕಾಲಾವಕಾಶ ಕೇಳಿದ್ದೇವೆ. ಅಷ್ಟರಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಅಭಿಪ್ರಾಯ ತಿಳಿಸಬಹುದು’ ಎಂದರು.

ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಮಹಾಂತೇಶ ಕೌಜಲಗಿ, ಮುಖಂಡರಾದ ಎಚ್.ಎಂ. ರೇವಣ್ಣ, ಫಿರೋಜ್‌ ಸೇಠ್, ಅಶೋಕ ಪಟ್ಟಣ, ಅರವಿಂದ ದಳವಾಯಿ, ಜಿ.ಎಸ್. ಪಾಟೀಲ, ಎಲ್‌. ಹನುಮಂತಯ್ಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಇದ್ದರು.

***

ಸರ್ಕಾರವು, ಉಪ ಚುನಾವಣೆಗಳ ಹೊಸ್ತಿಲಲ್ಲಿ ದುರುದ್ದೇಶದಿಂದ ಮರಾಠಾ ಅಭಿವೃದ್ಧಿ ನಿಗಮ ರಚಿಸಿರುವುದು ಸರಿಯಲ್ಲ
-ಎಂ.ಬಿ. ಪಾಟೀಲ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.