ADVERTISEMENT

ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಅಮೆರಿಕದಿಂದಲೂ ಅರ್ಜಿ!

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 12:43 IST
Last Updated 9 ಜನವರಿ 2021, 12:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಟಿಕೆಟ್‌ಗೆ, ಪ್ರಸ್ತುತ ಅಮೆರಿಕದ ವಾಷಿಂಗ್ಟನ್‌ನಲ್ಲಿ ನೆಲೆಸಿರುವ ಮೂಡಲಗಿ ತಾಲ್ಲೂಕು ಹಳ್ಳೂರ ಮೂಲದವರಾದ ಸೂರ್ಯಕಾಂತ ಸಂತ್ರಿ ಅನಿವಾಸಿ ಭಾರತೀಯ ಕೋಟಾ (ಎನ್‌ಆರ್‌ಐ)ದಲ್ಲಿ ಟಿಕೆಟ್‌ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಅವರು, ಬಿಜೆಪಿ ಕೇಂದ್ರ ಕಚೇರಿಗೆ, ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರಿಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ. ಬಿ.ಟೆಕ್. ಪದವೀಧರರಾದ 62 ವರ್ಷದ ಸೂರ್ಯಕಾಂತ ಅಮೆರಿಕದಲ್ಲಿ ಉದ್ಯಮಿಯಾಗಿದ್ದಾರೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಇನ್ನೊಂದೆಡೆ, ಆ ಕುಟುಂಬಕ್ಕೆ ಟಿಕೆಟ್ ತಪ್ಪಿಸಲು ಪಕ್ಷದಲ್ಲಿನ ಹಲವರು ಪ್ರಯತ್ನಿಸುತ್ತಿದ್ದಾರೆ. ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಮುಖಂಡರಾದ ಸಂಜಯ ಪಾಟೀಲ, ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಅಮಿತ್ ಕೋರೆ, ಡಾ.ರವಿ ಪಾಟೀಲ, ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮೊದಲಾದವರು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಜ.17ರಂದು ಗೃಹ ಸಚಿವ ಅಮಿತ್‌ ಶಾ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.