ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಎದುರಿಸುತ್ತಿರುವ ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಿರುವ ತುರ್ತು ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ನಿಯೋಗ ಶೀಘ್ರವೇ ಬೆಂಗಳೂರಿಗೆ ತೆರಳಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಭೇಟಿಯಾಗಲಿದೆ’ ಎಂದು ಸಂಘಟನೆಯ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
‘ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಬೆಳಗಾವಿ ಪಾಲಿಕೆಗೆ ಸಿಗಬೇಕಿರುವ ಅನುದಾನ ಸಕಾಲದಲ್ಲಿ ಲಭಿಸುತ್ತಿಲ್ಲ. ಇದರಿಂದಾಗಿ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ಮಂಗಳವಾರ ನಡೆದ ಪಾಲಿಕೆ ತುರ್ತು ಸಭೆಯಲ್ಲೂ ಸದಸ್ಯರು ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಪಾಲಿಕೆ ವ್ಯಾಪ್ತಿಯ 58 ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಬೇಕಿದೆ’ ಎಂದರು.
‘ಈ ಸಂಬಂಧ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರೊಂದಿಗೆ ನಗರಾಭಿವೃದ್ಧಿ ಸಚಿವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಭೇಟಿಯಾಗಿ ಗಮನಸೆಳೆಯಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.