ಬೆಳಗಾವಿ: ‘ಜಿಲ್ಲೆಯಲ್ಲಿ ಈಗಾಗಲೇ ಪರಿಶಿಷ್ಟ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದ್ದು, ಅಗತ್ಯವಿರುವ ಗ್ರಾಮಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸ್ಮಶಾನ ಭೂಮಿ ಖರೀದಿಗೆ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಲೋಂಡಾದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಸ್ಮಶಾನ ಭೂಮಿ ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ವರದಿ ತಯಾರಿಸಿ ಪ್ರಸ್ತಾವ ಸಲ್ಲಿಸಬೇಕು. ಖಾನಾಪುರದಲ್ಲಿ ಸ್ಮಶಾನ ಭೂಮಿಗೆ ಅಗತ್ಯ ಭೂಮಿ ನೀಡಲು ಸಾರ್ವಜನಿಕರು ಮುಂದಾದರೆ ಅಂತಹ ಜಮೀನು ಖರೀದಿಗೆ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದರು.
‘ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಎಸ್.ಎಸಿ-ಎಸ್.ಟಿ ವರ್ಗದವರು ಆಸ್ಪತ್ರೆಗೆ ಬರುವ ಸಮಯದಲ್ಲಿ ಜಾತಿ ಪ್ರಮಾಣ ಪತ್ರ ಬಿಟ್ಟು ಬಂದಲ್ಲಿ ತಾತ್ಕಾಲಿಕವಾಗಿ ಚಿಕಿತ್ಸೆ ಒದಗಿಸಬೇಕು. ಬಳಿಕ ಜಾತಿ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೋಗಿಗಳು ಚಿಕಿತ್ಸೆಗಾಗಿ ಭರಿಸಿದ ಮೊತ್ತವನ್ನು 48 ಗಂಟೆಯೊಳಗಾಗಿ ಜಾತಿ ಪ್ರಮಾಣಪತ್ರ ಒದಿಗಿಸದ್ದಲ್ಲಿ ಮೊತ್ತವನ್ನು ಮರಳಿಸಲು ಕ್ರಮ ಕೈಗೊಳ್ಳಬೇಕು’ ಎಂದೂ ಅವರು ಸೂಚಿಸಿದರು.
ದೌರ್ಜನ್ಯ ನಿಯಂತ್ರಣ ಸಮಿತಿಯ ಸದಸ್ಯ ಕರೆಪ್ಪ ಗುಡೆನ್ನವರ ಮಾತನಾಡಿ, ‘ಅರಣ್ಯ ಇಲಾಖೆಯಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮತ್ತು ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಎಸ್.ಸಿ-ಎಸ್.ಟಿ ನೌಕರರಿಗೆ ನಿಯಮಾನುಸಾರ ಮುಂಬಡ್ತಿ ತಡವಾಗುತ್ತಿದೆ. ಈಗಾಗಲೇ ಸಾಕಷ್ಟು ಬಾರಿ ಈ ವಿಷಯದ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಿಯಮಾನುಸಾರ ಮುಂಬಡ್ತಿ ಆದೇಶಿಸಬೇಕು’ ಎಂದು ಆಗ್ರಹಿಸಿದರು.
ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತೆ ಶುಭ, ಮುಖಂಡ ಮಲ್ಲೇಶ ಚೌಗಲಾ, ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಬಸವರಾಜ ಆಯಟ್ಟಿ, ವಿಜಯ ತಳವಾರ, ಸಿದ್ಧರಾಯ ಮೇತ್ರಿ ಇತರರು ಇದ್ದರು.
ನಗರದ ಆರ್‌ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕ ಎಂದು ನಾಮಕರಣ ಮಾಡಲು ಚರ್ಚಿಸಲಾಗಿದೆ. ಆದರೆ ಬೇರೆ ಹೆಸರು ನಾಮಕರಣಕ್ಕೆ ಪಾಲಿಕೆ ಪರಿಷತ್‌ನಲ್ಲಿ ತೀರ್ಮಾನಿಸಲಾಗಿದೆಕರೆಪ್ಪ ಗುಡೆನ್ನವರ ಸದಸ್ಯ ದೌರ್ಜನ್ಯ ನಿಯಂತ್ರಣ ಸಮಿತಿ
ದೌರ್ಜನ್ಯ ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿ ಇತ್ಯರ್ಥಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ವಿತರಣೆಯಲ್ಲಿ ಯಾವುದೇ ಪ್ರಕರಣ ಬಾಕಿ ಇಲ್ಲರಾಮನಗೌಡ ಕನ್ನೋಳ್ಳಿ ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.