ಬೆಳಗಾವಿ: ‘ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುತ್ತೇವೆ. ಇದಕ್ಕೆ ನಮ್ಮ ಪೆನಲ್ ಬೆಂಬಲಿಸಿ’ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ನಗರದಲ್ಲಿ ಶುಕ್ರವಾರ ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಂಗವಾಗಿ ಜರುಗಿದ ಬೆಳಗಾವಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ‘ಎಲ್ಲ ಪಿಕೆಪಿಎಸ್‌ಗಳಿಗೆ ಬ್ಯಾಂಕಿನಿಂದ ಹೆಚ್ಚಿನ ಪ್ರಮಾಣದಲ್ಲಿ ಪತ್ತು ದೊರಕಬೇಕು. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಬೇಕು. ರೈತರ ಕಷ್ಟಗಳಿಗೆ ಸ್ಪಂದಿಸುವ ಯೋಗ್ಯ ಅಭ್ಯರ್ಥಿಯನ್ನು ಹಾಕಲು ಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ನಾವೆಲ್ಲರೂ ಸೇರಿಕೊಂಡು ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ’ ಎಂದರು.
‘ನಮ್ಮ ಕೈಗೆ ಅಧಿಕಾರ ಬಂದೇ ಬರುತ್ತದೆ. ಜಿಲ್ಲಾ ಹಾಲು ಒಕ್ಕೂಟವನ್ನು ಕಳೆದ ಎರಡು ವರ್ಷಗಳಲ್ಲಿ ಯಾವ ರೀತಿಯಲ್ಲಿ ಲಾಭ ಮಾಡಿದ್ದೇವೋ ಅದೇ ರೀತಿಯಲ್ಲಿ ಬಿಡಿಸಿಸಿ ಬ್ಯಾಂಕಿಗೆ ಲಾಭವನ್ನು ತಂದು ಕೊಡುವ ಕೆಲಸ ಮಾಡುತ್ತೇವೆ. ರೈತರ ನಂಬಿಕೆಗಳಿಗೆ ನಾವೆಂದೂ ಅವಿಶ್ವಾಸವನ್ನು ಮಾಡುವುದಿಲ್ಲ’ ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಬಿಡಿಸಿಸಿ ಬ್ಯಾಂಕ್ ಪ್ರತಿಷ್ಠಿತವಾಗಿದ್ದು, ಇದಕ್ಕೆ ನಿರ್ದೇಶಕರಾಗಬೇಕೆಂಬ ಆಶಯ ಎಲ್ಲರದ್ದೂ ಆಗಿದೆ. ಅಂತೆಯೇ ಕೆಲವರು ಇದನ್ನೇ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ, ಯಾವುದೇ ಸ್ವಾರ್ಥವಿಲ್ಲದೇ ಬಾಲಚಂದ್ರ ಜಾರಕಿಹೊಳಿ ಜಿಲ್ಲೆಯಾದ್ಯಂತ ಸಂಚರಿಸಿ, ಪಕ್ಷಬೇಧ ಮರೆತು ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವಿರೋಧ ಆಯ್ಕೆಗೆ ಶ್ರಮಿಸುತ್ತಿದ್ದಾರೆ’ ಎಂದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಪಾಟೀಲ ಪ್ರಾಸ್ತಾವಿಕ ಭಾಷಣ ಮಾಡಿದರು. ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗೋಡೆ, ಯುವ ಮುಖಂಡ ರಾಹುಲ್ ಜಾರಕಿಹೊಳಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೃಷ್ಣ ಅನಗೋಳಕರ, ಶಂಕರಗೌಡ ಪಾಟೀಲ ವೇದಿಕೆ ಮೇಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.