ADVERTISEMENT

ಡಿಸಿಸಿ ಬ್ಯಾಂಕ್ ಚುನಾವಣೆ: ಕಣದಿಂದ ಹಿಂದೆ ಸರಿದ ಚನ್ನರಾಜ ಹಟ್ಟಿಹೊಳಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2025, 14:04 IST
Last Updated 28 ಆಗಸ್ಟ್ 2025, 14:04 IST
ಚನ್ನರಾಜ ಹಟ್ಟಿಹೊಳಿ
ಚನ್ನರಾಜ ಹಟ್ಟಿಹೊಳಿ   

ಬೆಳಗಾವಿ: ಡಿಸಿಸಿ ಬ್ಯಾಂಕಿನ ಖಾನಾಪುರ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ಹೊಸ ತಿರುವು ಪಡೆದಿದೆ.

‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಹೋದರ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಖಾನಾಪುರ ಕ್ಷೇತ್ರದ ಚುನಾವಣೆಯಿಂದ ಹಿಂದಕ್ಕೆ ಸರಿದಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರಕಟಿಸಿದ್ದಾರೆ.

ಬುಧವಾರ ವಿಡಿಯೊ ಹೇಳಿಕೆ ಬಿಡುಗಡೆಗೊಳಿಸಿದ ಅವರು, ‘ಖಾನಾಪುರ ಕ್ಷೇತ್ರದಿಂದ ಸ್ಪರ್ಧೆಗಾಗಿ ಚನ್ನರಾಜ ಹಟ್ಟಿಹೊಳಿ ನಾಲ್ಕೈದು ತಿಂಗಳಿಂದ ತಯಾರಿ ನಡೆಸಿದ್ದರು. ಖಾನಾಪುರ ತಾಲ್ಲೂಕಿನ ವಿವಿಧ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕಿಸಿ, ಬೆಂಬಲ ಪಡೆದಿದ್ದರು. ಆದರೆ, ಜಿಲ್ಲೆಯಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ವಿದ್ಯಮಾನಗಳ ಹಿನ್ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

‘ಚನ್ನರಾಜ ಹಟ್ಟಿಹೊಳಿ ಅವರೊಂದಿಗೆ ಸುಧೀರ್ಘವಾಗಿ ಚರ್ಚಿಸಿದ ನಂತರ, ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಕಾರಣವೇನು ಎಂಬುದನ್ನು ನಂತರ ವಿವರವಾಗಿ ತಿಳಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಅಕ್ಟೋಬರ್‌ನಲ್ಲಿ ಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಯಲಿದೆ. ಕೆಲವು ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದರೆ, ಇನ್ನೂ ಕೆಲ ಕ್ಷೇತ್ರಗಳಲ್ಲಿ ಸ್ಪರ್ಧೆ ಏರ್ಪಡಲಿದೆ. ಇದು ರಾಜಕೀಯ ಪಕ್ಷಗಳ ಚುನಾವಣೆಯಲ್ಲ’ ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಬದ್ಧ: ಚನ್ನರಾಜ ಹಟ್ಟಿಹೊಳಿ

‘ಸಚಿವ ಸತೀಶ ಜಾರಕಿಹೊಳಿ ಅವರು ನೀಡಿದ ಹೇಳಿಕೆಗೆ ನಾನು ಬದ್ಧನಿದ್ದೇನೆ’ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿಸಿಸಿ ಬ್ಯಾಂಕ್‌ ಚುನಾವಣೆಗಾಗಿ ಖಾನಾಪುರ ಕ್ಷೇತ್ರದಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಸಕ್ರಿಯವಾಗಿ ಕೆಲಸ ಮಾಡಿದ್ದೆವು. ಹಲವು ಪಿಕೆಪಿಎಸ್‌ಗಳಿಂದ ನಮಗೆ ಬೆಂಬಲ ಸಿಕ್ಕಿತ್ತು. ಆದರೆ, ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಸತೀಶ ಜಾರಕಿಹೊಳಿ ಅವರೊಂದಿಗೆ ಚರ್ಚಿಸಿ, ಚುನಾವಣೆಗೆ ಸ್ಪರ್ಧಿಸದಿರುವ ನಿರ್ಧಾರಕ್ಕೆ ಬಂದಿದ್ದೇವೆ’ ಎಂದರು.

‘ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ಮುಖಂಡರಿಗೂ ಈ ವಿಷಯ ತಿಳಿಸಿ ಮನವೊಲಿಸಲಾಗುವುದು’ ಎಂದು ತಿಳಿಸಿದರು.

‘ವಿಧಾನ ಪರಿಷತ್‌ ಸದಸ್ಯನಾಗಿ ಖಾನಾಪುರ ಕ್ಷೇತ್ರದ ಅಭಿವೃದ್ಧಿಗೆ ಮುಂದೆಯೂ ಶ್ರಮಿಸುತ್ತೇನೆ. ಅಭಿವೃದ್ಧಿ ಕೆಲಸ ಎಂದಿನಂತೆ ಮುಂದುವರಿಯಲಿವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.