ADVERTISEMENT

ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ

ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ: ಜಿಲ್ಲಾಧಿಕಾರಿ ಹಿರೇಮಠ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 10:27 IST
Last Updated 12 ಅಕ್ಟೋಬರ್ 2021, 10:27 IST
ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಹೋರಾಟಗಾರರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದಾರೆಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಹೋರಾಟಗಾರರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದಾರೆಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಈ ಬಾರಿಯ ಕರ್ನಾಟಕ ರಾಜ್ಯೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಪಾಲಿಸಿಕೊಂಡು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ರಾಜ್ಯೋತ್ಸವ ಮೆರವಣಿಗೆಗೆ ಕೋವಿಡ್ ಮಾರ್ಗಸೂಚಿ ಆಧರಿಸಿ ಅನುಮತಿ ನೀಡಲಾಗುವುದು. ಎಲ್ಲರೂ ಸೇರಿ ಶಾಂತಿಯುತ ಹಾಗೂ ಸಂಭ್ರಮದಿಂದ ಆಚರಿಸೋಣ. ಗಡಿಯಲ್ಲಿ ರಾಜ್ಯೋತ್ಸವವನ್ನು ಸಂಭ್ರಮದಿಂದ ನಡೆಸುವುದು ಅಗತ್ಯವಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಹೋರಾಟಗಾರರ ಸಲಹೆ–ಸೂಚನೆಗಳನ್ನು ಆಧರಿಸಿ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು. ಯಾವುದಕ್ಕೂ ಕೊರತೆ ಅಗದಂತೆ ನೋಡಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಶೇ.84ರಷ್ಟು ಲಸಿಕಾಕರಣ:

‘ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಶೇ.84ರಷ್ಟು ಕೋವಿಡ್ ಲಸಿಕಾಕರಣ ಆಗಿದೆ. ಕೋವಿಡ್ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಆದರೆ, ಸಂಪೂರ್ಣ ಹೋಗಿಲ್ಲ. ಸದ್ಯಕ್ಕೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ.0.3ರಷ್ಟಿದೆ. ನೆರೆಯ ಮಹಾರಾಷ್ಟ್ರ ಹಾಗೂ ಗೋವಾದಲ್ಲೂ ಕೋವಿಡ್ ಪ್ರಕರಣ ಇಳಿಕೆಯಾಗಿದೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘಟನೆಗಳು ಜಾಗೃತಿ ಮಾಡಿಸಬೇಕು’ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ‘ಈ ಬಾರಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ನೆಲ ಕಚ್ಚಿದೆ. ಹೀಗಾಗಿ, ಅದ್ಧೂರಿ ರಾಜ್ಯೋತ್ಸವಕ್ಕೆ ಅನುಮತಿ ಕೊಡಬೇಕು. ಕಿತ್ತೂರು ಉತ್ಸವ ವೇಳೆ ಮುಂಬೈ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ಮರು ನಾಮಕರಣ ಮಾಡುವಂತೆ ನಿರ್ಣಯ ಮಾಡಿ ಸರ್ಕಾರಕ್ಕೆ ಕಳುಹಿಸಬೇಕು’ ಎಂದು ಒತ್ತಾಯಿಸಿದರು.

ಕನ್ನಡ ಬಾವುಟ ಹಾರಿಸಬೇಕು:

ಹೋರಾಟಗಾರ ಶ್ರೀನಿವಾಸ ತಾಳೂಕರ, ‘ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಬೇಕು. ಕೇಂದ್ರ ಬಸ್ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರು ನಾಮಕರಣ ಮಾಡಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಅನಂತ ಬ್ಯಾಕೂಡ, ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಬೇಕು. ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರ ವಿಶೇಷ ಅನುದಾನ ಒದಗಿಸಬೇಕು. ಮೆರವಣಿಗೆ ವೇಳೆ, ರಾಣಿ ಚನ್ನಮ್ಮ ಪ್ರತಿಮೆಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಬೇಕು. ಮಧ್ಯಾಹ್ನ ಹೋಳಿಗೆ ಊಟದ ವ್ಯವಸ್ಥೆ ಮಾಡಬೇಕು. ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ನವೆಂಬರ್ ಅಂತ್ಯದವರೆಗೆ ಕಾರ್ಯಕ್ರಮ ಏರ್ಪಡಿಸಬೇಕು’ ಎಂದು ಆಗ್ರಹಿಸಿದರು.

ವಾಹನಗಳನ್ನು ಒದಗಿಸಿ:

ಕನ್ನಡಪರ ಸಂಘಟನೆಗಳ ಮುಖಂಡ ಮಹಾದೇವ ತಳವಾರ, ‘ಪಾಲಿಕೆಯ ನೂತನ ಸದಸ್ಯರು ಆಯಾ ವಾರ್ಡ್‌ಗಳಲ್ಲಿ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಬೇಕು. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿಯಿಂದ ಕಟ್ಟುನಿಟ್ಟಾಗಿ ಆದೇಶಿಸಬೇಕು. ಸ್ತಬ್ಧಚಿತ್ರಗಳ ಮೆರವಣಿಗೆಗೆ ವಾಹನಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ರೂಪಕ ವಾಹನಗಳು ಹಾಗೂ ಮೆರವಣಿಗೆಗೆ ಅವಕಾಶ ನೀಡಬೇಕು’ ಎಂದು ಪತ್ರಕರ್ತ ಅರವಿಂದ ದೇಶಪಾಂಡೆ ಒತ್ತಾಯಿಸಿದರು.

ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಜಿ.ಪಂ. ಸಿಇಒ ಎಚ್‌.ವಿ. ದರ್ಶನ್, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ, ಕನ್ನಡ ಹೋರಾಟಗಾರರಾದ ಕಸ್ತೂರಿ ಭಾವಿ, ರಮೇಶ ಸೊಂಟಕ್ಕಿ, ಪ್ರಕಾಶ ನಾಯ್ಕ, ಸುರೇಶ ಖಿರಾಯಿ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಲಂಡನ್ ಕನ್ನಡ ಸಂಘದ ರಾಜು ಮೇತ್ರಿ ಪಾಲ್ಗೊಂಡಿದ್ದರು.

ಆರಂಭದಲ್ಲಿ, ಕನ್ನಡ ಹಾಗೂ ರೈತ ಪರ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನ ಆಚರಿಸಲಾಯಿತು.

ಅನುಷ್ಠಾನಕ್ಕೆ ಕ್ರಮ ವಹಿಸಿ

ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಠಾನಕ್ಕೂ ಒತ್ತು ನೀಡಬೇಕು. ಜಿಲ್ಲಾಧಿಕಾರಿ ನಿಯಮಿತವಾಗಿ ಸಭೆ ನಡೆಸಬೇಕು. ಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯುವಂತೆ ನೋಡಿಕೊಳ್ಳಬೇಕು.

–ದೀಪಕ ಗುಡಗನಟ್ಟಿ, ಅಧ್ಯಕ್ಷ, ಕರವೇ ಜಿಲ್ಲಾ ಘಟಕ

ಪ್ರಶಸ್ತಿ ನೀಡಬೇಕು

ಕನ್ನಡಪರ ಹೋರಾಟಗಾರರು ಹಾಗೂ ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಬೇಕು. ಮೆರವಣಿಗೆ ವೀಕ್ಷಿಸಲು ಮಹಿಳೆಯರಿಗೆ ಚನ್ನಮ್ಮ ವೃತ್ತದಲ್ಲಿ ಪ್ರತ್ಯೇಕವಾಗಿ ಗ್ಯಾಲರಿ ನಿರ್ಮಿಸಬೇಕು.

–ಮೆಹಬೂಬ ಮಕಾನದಾರ, ಕನ್ನಡಪರ ಹೋರಾಟಗಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.