ಜ್ಯೋತಿ ಹತ್ತರವಾಟ, ಮೇಘಾ
ಬೆಳಗಾವಿ: ‘ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮರಣ ಹೊಂದಿದ ಬೆಳಗಾವಿ ನಾಲ್ವರ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸರ್ಕಾರವು ತಲಾ ₹25 ಲಕ್ಷ ಪರಿಹಾರ ಬಿಡುಗಡೆ ಮಾಡಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
‘ಪ್ರಯಾಗ್‌ರಾಜ್ ಜಿಲ್ಲಾಧಿಕಾರಿ ರವಿ ಮಂದರ್ ಅವರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಕಾಲ್ತುಳಿತದಲ್ಲಿ ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ ಅವರ ಕುಟುಂಬಸ್ಥರ ಖಾತೆಗಳಿಗೆ ನೇರವಾಗಿ ಪರಿಹಾರ ಧನ ಜಮೆ ಆಗಿದೆ. ನಾವು ಗ್ರಾಮ ಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಿದ್ದೇವೆ’ ಎಂದು ಅವರು ನಗರದಲ್ಲಿ ಬುಧವಾರ ಮಾಧ್ಯಮದವರಿಗೆ ಮಾಹಿತಿ ನೀಡಿದರು.
‘ಮೃತದೇಹಗಳ ವರದಿಯಲ್ಲಿ ಒಂದಿಬ್ಬರ ಹೆಸರಿನಲ್ಲಿ ಅಕ್ಷರದೋಷ ಕಂಡುಬಂದ ಕುರಿತು ಮೃತರ ಕುಟುಂಬಸ್ಥರು ತಿಳಿಸಿದ್ದರು. ಹಾಗಾಗಿ, ಅದನ್ನು ಅನುಮೋದಿಸಿ, ಸರಿಪಡಿಸಿ ಹೆಸರುಗಳನ್ನು ಪ್ರಯಾಗ್ ರಾಜ್ ಜಿಲ್ಲಾಧಿಕಾರಿಗಳಿಗೆ ವಾಟ್ಸ್‌ಆ್ಯಪ್ ಮತ್ತು ಮೇಲ್ ಕಳಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಮರಣೋತ್ತರ ವರದಿ ಮತ್ತು ಮರಣ ಪ್ರಮಾಣಪತ್ರವನ್ನು ಕಳಿಸಿಕೊಡುವ ಬಗ್ಗೆ ಅಲ್ಲಿನ ಜಿಲ್ಲಾಡಳಿತ ಭರವಸೆ ನೀಡಿದೆ’ ಎಂದರು.
ಜಿಲ್ಲೆಯಿಂದ ಮಹಾಕುಂಭ ಮೇಳಕ್ಕೆ ತೆರಳಿದವರಲ್ಲಿ ಒಟ್ಟು 16 ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಕಾಲ್ತುಳಿತದಲ್ಲಿ 10 ಮಂದಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಹಾಗೂ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಮಾತ್ರ ಉತ್ತರ ಪ್ರದೇಶ ಸರ್ಕಾರ ಪರಿಹಾರ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.